ಅಧಿಕಾರಿಗಳು ನಿಯಮಿತವಾಗಿ ಕ್ಷೇತ್ರ ಭೇಟಿ ಕೈಗೊಳ್ಳಲಿ: ಶಿವರಾಜ ತಂಗಡಗಿ
ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ
ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ
—
ಕೊಪ್ಪಳ : ಪ್ರತಿಯೊಂದು ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ನಿಯಮಿತವಾಗಿ ಪ್ರವಾಸ ಕೈಗೊಂಡು ಪ್ರತಿ ತಾಲೂಕುಗಳಲ್ಲಿ ಸಂಚರಿಸಿ ತಾಲೂಕು ಹಾಗೂ ಗ್ರಾಮೀಣ ಜನರ ಅಹವಾಲುಗಳನ್ನು ಸಹ ಆಲಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಕಚೇರಿಯ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಜೂನ್ 12ರಂದು ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಹಸೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಇನ್ನೀತರ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಜಿಲ್ಲಾಮಟ್ಟದ ಅಧಿಕಾರಿಗಳ ಕಾರ್ಯವು ಬರೀ ಜಿಲ್ಲಾಮಟ್ಟಕ್ಕಷ್ಟೇ ಸೀಮಿತವಾಗಬಾರದು. ಕಾಲಕಾಲಕ್ಕೆ ಗ್ರಾಮೀಣ ಭಾಗದಲ್ಲಿ ಸಂಚಾರ ಕೈಗೊಂಡು ಯೋಜನೆಗಳ ಅನುಷ್ಠಾನ ಮತ್ತು ಸಾರ್ವಜನಿಕ ಕುಂದುಕೊರತೆಗಳ ಬಗ್ಗೆ ತಮ್ಮ ಹಂತದಲ್ಲಿ ಪರಿಶೀಲನೆ ಮಾಡಿ ಪ್ರಗತಿ ವರದಿ ಸಲ್ಲಿಸಬೇಕು. ಸಾರ್ವಜನಿಕರ ಕರೆಗಳನ್ನು ಸ್ವೀಕರಿಸಬೇಕು. ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಸಚಿವರು ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.
ಆಯಾ ತಾಲೂಕಿನ ತಹಸೀಲ್ದಾರ ಕಚೇರಿಗಳು ಮತ್ತು ತಾಲೂಕು ಪಂಚಾಯತ್ ಕಚೇರಿಗಳಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯವೈಖರಿಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ತಹಸೀಲ್ದಾರ ಕಚೇರಿ ಮತ್ತು ತಾಪಂ ಇಓ ಕಚೇರಿಗೆಗಳಿಗೆ ನಿಯಮಿತವಾಗಿ ಭೇಟಿ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳು, ಯೋಜನಾ ನಿರ್ದೇಶಕರು, ಮುಖ್ಯ ಯೋಜನಾಧಿಕಾರಿಗಳಿಗೆ ಸಚಿವರು ಸಲಹೆ ಮಾಡಿದರು.
*ಹಣದ ಕೊರತೆಯಿಲ್ಲ:* ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿಯ ಹಣಕಾಸಿನ ತೊಂದರೆಯಿಲ್ಲ. ಹೀಗಾಗಿ ಜಿಲ್ಲೆಯಲ್ಲಿನ ಪ್ರತಿಯೊಂದು ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಸಲು ಕ್ರಮ ವಹಿಸಬೇಕು. ಜಲಜೀವನ್ ಮಿಷನ್ ಯೋಜನೆ ಅನುಷ್ಠಾನದಲ್ಲಿನ ಲೋಪದೋಷಗಳನ್ನು ಬೇಗನೆ ಸರಿಪಡಿಸಬೇಕು ಎಂದು ಸಚಿವರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಮತ್ತು ಇನ್ನೀತರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರ ಪ್ರದೇಶಗಳಲ್ಲಿ ಸಹ ಜನತೆಗೆ ಶುದ್ಧ ಕುಡಿಯುವ ನೀರು ನಿಯಮಿತವಾಗಿ ಪೂರೈಕೆಯಾಗಬೇಕು. ಈ ಬಗ್ಗೆ ಗಮನ ಹರಿಸಲು ಜಿಲ್ಲೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳ ಮೇಲೆ ಸೂಕ್ತ ಮೇಲ್ವಿಚಾರಣೆ ಮಾಡಬೇಕು ಎಂದು ಸಚಿವರು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ಸೂಚನೆ ನೀಡಿದರು.
*ಪ್ರಕರಣಗಳು ಮರುಕಳಿಸಿದಲ್ಲಿ ಕ್ರಮ:* ಅಧಿಕಾರಿಗಳು ಮತ್ತು ಸಿಬ್ಬಂದಿಯ ನಿಷ್ಕಾಳಜಿಯಿಂದಾಗಿ ಇನ್ಮುಂದೆ ಯಾವುದೇ ಗ್ರಾಮಗಳಲ್ಲಿ ವಾಂತಿ ಬೇಧಿ ಪ್ರಕರಣಗಳು ಮರುಕಳಿಸಿದಲ್ಲಿ, ಈ ಬಗ್ಗೆ ಅಧಿಕಾರಿಗಳು ತಮ್ಮ ಜವಾಬ್ದಾರಿ ಮರೆತು ಬೇರೆಯವರತ್ತ ಬೊಟ್ಟು ಮಾಡಿದಲ್ಲಿ ಅದಕ್ಕೆ ತಾಲೂಕುಮಟ್ಟದಲ್ಲಿನ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ತಹಸೀಲ್ದಾರ ಅವರನ್ನೇ ಹೊಣೆಯಾಗಿಸಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ ಸಚಿವರು, ಎಲ್ಲಾ ಪಿಡಿಓ ಅವರನ್ನು ತಾಪಂ ಇಓಗಳು ಹಿಡಿತದಲ್ಲಿಟ್ಟುಕೊಳ್ಳಬೇಕು ಎಂದು ಸಲಹೆ ಮಾಡಿದರು.
*ಎಲ್ಲಾ ಕ್ಷೇತ್ರಗಳನ್ನು ಸುತ್ತಿ:* ದಿನೇದಿನೆ ಬದಲಾಗುತ್ತಿರುವ ಹವಾಮಾನ ಆಧರಿಸಿ ಕಾಯಿಲೆ ಬೀಳುವ ಜನರಿಗೆ ತಕ್ಷಣ ಚಿಕಿತ್ಸೆ ಸಿಗುವ ನಿಟ್ಟಿನಲ್ಲಿ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ಕಾರ್ಯನಿರ್ವಹಿಸಬೇಕು. ಜಿಲ್ಲಾಮಟ್ಟದ ಹಾಗೂ ತಾಲೂಕುಮಟ್ಟದ ಆರೋಗ್ಯಾಧಿಕಾರಿಗಳು ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ನಿರಂತರ ಸುತ್ತಬೇಕು. ಅಧಿಕಾರಿಗಳು, ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯದಿಂದ ಸಾವು ಪ್ರಕರಣಗಳು ವರದಿಯಾದಲ್ಲಿ ಜಿಲ್ಲಾಮಟ್ಟದಲ್ಲಿನ ಅಧಿಕಾರಿಗಳನ್ನೇ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದ ಸಚಿವರು, ತಾಲೂಕುಮಟ್ಟದಲ್ಲಿ ತಹಸೀಲ್ದಾರರು, ತಾಪಂ ಇಓಗಳು ಮತ್ತು ತಾಲೂಕು ಆರೋಗ್ಯಾಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು.
*ಕೆಡಿಪಿ ಸಭೆಯ ಗಡುವು:* ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ತಾಲೂಕುಗಳಲ್ಲಿನ ಗ್ರಾಮಗಳಲ್ಲಿನ ಜನರಿಗೆ ಶುದ್ಧ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲಾಮಟ್ಟದಲ್ಲಿನ ಅಧಿಕಾರಿಗಳಿಗೆ ತಾಲೂಕುವಾರು ನೋಡಲ್ ಅಧಿಕಾರಿಗಳೆಂದು ಜವಾಬ್ದಾರಿ ವಹಿಸಬೇಕು. ಕುಡಿಯುವ ನೀರು, ಮೂಲಭೂತ ಸೌಕರ್ಯ ಸೇರಿದಂತೆ ನಾನಾ ವಿಷಯಗಳ ಬಗ್ಗೆ ನೋಡಲ್ ಅಧಿಕಾರಿಗಳ ಹಂತದಲ್ಲಿ ಪ್ರತಿಯೊಂದು ತಾಲೂಕುಗಳಲ್ಲಿ ಸಭೆಗಳು ನಡೆದ ಬಗ್ಗೆ ವರದಿ ಸಿದ್ಧಪಡಿಸಬೇಕು. ಬರುವ ಕೆಡಿಪಿ ಸಭೆಯೊಳಗೆ ಈ ಕಾರ್ಯವಾಗಬೇಕು ಎಂದು ಸಚಿವರು ಅಧಿಕಾರಿಗಳಿಗೆ ಗಡುವು ವಿದಿಸಿದರು.
*ತಾರತಮ್ಯ ಬೇಡ:* ಬಿತ್ತನೆ ಬೀಜ ಹಾಗೂ ಗೊಬ್ಬರ ದಾಸ್ತಾನಿನ ಬಗ್ಗೆ ಆಯಾ ವಿಧಾನಸಭಾ ಕ್ಷೇತ್ರಗಳ ಶಾಸಕರಿಗೆ ಮತ್ತು ರೈತರಿಗೆ ಕಾಲಕಾಲಕ್ಕೆ ಮಾಹಿತಿ ಕೊಡಬೇಕು. ಬೀಜ ಮತ್ತು ಗೊಬ್ಬರ ವಿತರಣೆಯಲ್ಲಿ ತಾರತಮ್ಯವಾಗುತ್ತದೆ ಎನ್ನುವ ದೂರುಗಳು ಬರಬಾರದು. ವಿತರಕರಿಂದ ರೈತರಿಗೆ ತೊಂದರೆಯಾಗದ ಹಾಗೆ ನೋಡಿಕೊಳ್ಳಬೇಕು ಎಂದು ಸಚಿವರು ಜಂಟಿ ಕೃಷಿ ನಿರ್ದೇಶಕರಿಗೆ ಸೂಚನೆ ನೀಡಿದರು.
*ಕಾನೂನುಬಾಹೀರ ಚಟುವಟಿಕೆ ಮೇಲೆ ನಿಗಾವಹಿಸಿ:* ಸಮಾಜದ ಸ್ವಾಸ್ತ್ಯ ಹಾಳು ಮಾಡುವ ಓಸಿ, ಇಸ್ಪಿಟ್ ಆಡುವವರ ಮತ್ತು ಅದರ ಹಿಂದಿರುವ ವ್ಯಕ್ತಿಗಳ ಮೇಲೆ ತೀವ್ರ ನಿಗಾವಹಿಸಬೇಕು. ಅಕ್ರಮ ಮರುಳು ಸಾಗಣೆಗೆ ಕಡಿವಾಣ ಹಾಕಬೇಕು ಎಂದು ಇದೆ ವೇಳೆ ಸಚಿವರು, ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
*ಅಧಿಕಾರಿಗಳಿಗೆ ಸಲಹೆ:* ಯಾವುದೇ ದೂರುಗಳು ಬಾರದ ಹಾಗೆ ಶಕ್ತಿ ಯೋಜನೆಯು ಸಮರ್ಪಕವಾಗಿ ಅನುಷ್ಠಾನಗೊಳ್ಳಲು ತಾಲೂಕು ಕೇಂದ್ರದಲ್ಲಿ ಪ್ರವಾಸ ನಡೆಸಿ ಮೇಲ್ವಿಚಾರಣೆ ಮಾಡುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು. ಅನ್ನಭಾಗ್ಯ ಯೋಜನೆ ಜಾರಿಗೆ ಸಿದ್ಧತೆ ಮಾಡಿಕೊಳ್ಳಲು ಮತ್ತು ಜನರಿಗೆ ಗೊಂದಲ ಆಗದಂತೆ ಗೃಹಜ್ಯೋತಿ ಯೋಜನೆ ಜಾರಿಗೆ ತಯಾರಿ ಮಾಡಿಕೊಳ್ಳಲು ಆಹಾರ ಇಲಾಖೆ ಮತ್ತು ಜೆಸ್ಕಾಂ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಮಾತನಾಡಿ, ಜೆಜೆಎಂ ಯೋಜನೆಯ ಬಾಕಿ ಕಾರ್ಯಗಳನ್ನು ಬೇಗನೆ ಪೂರ್ಣಗೊಳಿಸಬೇಕು. ಆಸ್ಪತ್ರೆಗಳಲ್ಲಿ ಶುಚಿತ್ವ ಕಾಯ್ದುಕೊಳ್ಳಲು ಅಗತ್ಯ ಕ್ರಮ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಮಾತನಾಡಿ, ಕೃಷಿ ಸೇರಿದಂತೆ ಇನ್ನೀತರ ವಿವಿಧ ಇಲಾಖೆಗಳು ಮತ್ತು ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ನಿಯಮಿತವಾಗಿ ಜಿಲ್ಲಾಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿ, ಮುಂಗಾರು ಹಂಗಾಮಿನ ಹಿನ್ನೆಲೆಯಲ್ಲಿ ಎಲ್ಲ ಬೆಳೆಗಳ ಬಿತ್ತನೆ ಬೀಜಗಳ ಮತ್ತು ಗೊಬ್ಬರದ ದಾಸ್ತಾನಿಗೆ, ಹವಾಮಾನ ಆಧರಿಸಿ ಬಿತ್ತನೆ ಮಾಡುವುದು ಮತ್ತು ಬೀಜೋಪಚಾರದ ಬಗ್ಗೆ ಕಾಲಕಾಲಕ್ಕೆ ರೈತ ಸಮೂಹಕ್ಕೆ ಸಲಹೆ ಮಾಡಲು ತಿಳಿಸಿದಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ. ಕಡಿ ಅವರು ಸ್ವಾಗತಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾವ್ಯ ಚತುರ್ವೇದಿ, ಕೊಪ್ಪಳ ಡಿಎಸ್ಪಿ ಶರಣಬಸಪ್ಪ ಸುಭೇದಾರ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಮೀರ್ ಮುಲ್ಲಾ, ಜಿಪಂ ಯೋಜನಾ ನಿರ್ದೇಶಕರಾದ ಟಿ.ಕೃಷ್ಣಮೂರ್ತಿ, ಮುಖ್ಯ ಯೋಜನಾಧಿಕಾರಿ ಮಂಜನಾಥ, ಮುಖ್ಯ ಲೆಕ್ಕಾಧಿಕಾರಿ ಅಮಿನ್ ಅತ್ತಾರ, ವಿವಿಧ ತಾಲೂಕುಗಳ ತಹಸೀಲ್ದಾರರು, ತಾಪಂ ಇಓಗಳು ಮತ್ತು ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲೂಕುಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Comments are closed.