ಮಕ್ಕಳನ್ನು ಭಿಕ್ಷಾಟನೆಗೆ ತೊಡಗಿಸಿದರೆ ಕಾನೂನು ಕ್ರಮ: ಶೇಖರಗೌಡ ರಾಮತ್ನಾಳ

ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಕಾರ್ಯಕ್ರಮ

Get real time updates directly on you device, subscribe now.

*
—-
ಕೊಪ್ಪಳ ಜೂನ್ 16 : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಿದ್ದಾಪುರ ಹಾಗೂ ಗ್ರಾಮ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಜೂನ್ 16ರಂದು ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಕಡ್ಡಾಯ ಮತ್ತು ಉಚಿತ ಶಿಕ್ಷಣ ಕಾಯ್ದೆ-2009, ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012, ಬಾಲ್ಯವಿವಾಹ ನಿಷೇದ ಕಾಯ್ದೆ-2006 ಮತ್ತು (ಕರ್ನಾಟಕ ತಿದ್ದುಪಡಿ) 2016 ಹಾಗೂ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ನಡೆಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ ರಾಮತ್ನಾಳ ಅವರು ಮಾತನಾಡಿ, ಭಾರತ ದೇಶವು ಅಂತರರಾಷ್ಟ್ರೀಯ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಸಹಿಹಾಕಿದ್ದು, ದೇಶದ ಎಲ್ಲಾ ಮಕ್ಕಳಿಗೂ ಬದುಕುವ ಹಕ್ಕುಗಳು, ಅಭಿವೃದ್ಧಿ ಮತ್ತು ವಿಕಾಸಹೊಂದುವ ಹಕ್ಕುಗಳು, ಶೋಷಣೆಯ ವಿರುದ್ಧ ಸಂರಕ್ಷಣೆ ಹಕ್ಕುಗಳು ಮತ್ತು ಭಾಗವಹಿಸುವ ಹಕ್ಕುಗಳನ್ನು ನೀಡಿದೆ. ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015 ಅನ್ವಯ ಬಾಲ ಭಿಕ್ಷಾಟನೆಯು ಶಿಕ್ಷಾರ್ಹ ಅಪರಾಧವಾಗಿದ್ದು, ಯಾವುದೇ ಮಗುವನ್ನು ತಂದೆ-ತಾಯಿಗಳು ಅಥವಾ ಪೋಷಕರು ಮಗುವನ್ನು ಭಿಕ್ಷಾಟನೆಯಲ್ಲಿ ತೊಡಗಿಸಿದರೆ, ಅತಂಹ ಮಕ್ಕಳನ್ನು ಅವರ ವಶದಿಂದ ಮಗುವನ್ನು ಬಿಡುಗಡೆಗೊಳಿಸಿ, ಆ ಮಗುವನ್ನು ಪೋಷಣೆ ಮತ್ತು ರಕ್ಷಣೆ ಅವಶ್ಯವಿರುವ ಮಗುವೆಂದು ಘೋಷಿಸಬಹುದಾಗಿದೆ. ಪಾಲಕರ ಅಥವಾ ಪೋಷಕರ ವಿರುದ್ಧ ಪ್ರಕರಣವನ್ನು ದಾಖಲಿಸಬಹುದಾಗಿದೆ. ಈ ಕೃತ್ಯಕ್ಕೆ 05 ವರ್ಷಗಳ ಜೈಲು ಶಿಕ್ಷೆ ಮತ್ತು ರೂ. 1 ಲಕ್ಷ ದಂಡವನ್ನು ವಿಧಿಸಬಹುದಾಗಿದೆ ಎಂದರು.
ಒಂದುವೇಳೆ ಭಿಕ್ಷೆಯನ್ನು ಬೇಡಿಸುವ ಉದ್ದೇಶಕ್ಕಾಗಿ ಮಗುವಿನ ಯಾವುದೇ ಅಂಗವನ್ನು ಊನಗೊಳಿಸುವುದು ಸಹ ಶಿಕ್ಷಾರ್ಹ ಅಪರಾಧವಾಗಿದ್ದು, ಈ ಕೃತ್ಯಕ್ಕೆ 7 ರಿಂದ 10 ವರ್ಷಗಳ ಜೈಲು ಶಿಕ್ಷೆ ಮತ್ತು ರೂ. 5 ಲಕ್ಷ ರೂಪಾಯಿ ದಂಡವನ್ನು ವಿಧಿಸಬಹುದಾಗಿದೆ. ಮಕ್ಕಳ ಹಕ್ಕುಗಳ ಕುರಿತಾದ ಯಾವುದೇ ದೂರುಗಳಿಗಾಗಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಟೋಲ್ ಫ್ರೀ ನಂಬರ 1800-425-2900ಗೆ ಸಂಪರ್ಕಿಸಬಹುದಾಗಿದೆಂದು ವಿವರಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ರೋಹಿಣಿ ಕೊಟಗಾರ ಅವರು ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಸರ್ಕಾರವು “ಮಿಷನ್ ವಾತ್ಸಲ್ಯ” ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಸರಕಾರಿ ಬಾಲಕರ ಬಾಲಮಂದಿರ ಮತ್ತು ಬಾಲಕಿಯರ ಬಾಲಮಂದಿರಗಳನ್ನು, ವಿಶೇಷ ದತ್ತು ಸೇವಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸಂಕಷ್ಟಕರ ಪರಸ್ಥಿತಿಯಲ್ಲಿರುವ ಮಕ್ಕಳಿಗಾಗಿ ಪ್ರಾಯೋಜಕತ್ವ, ವಿಶೇಷ ಪಾಲನಾ ಯೋಜನೆ, ಪಿ.ಎಮ್ ಕರ್ಸ ಫಾರ್ ಚಿಲ್ಡ್ರನ್ ಯೋಜನೆ, ಮುಖ್ಯಮಂತ್ರಿ ಬಾಲ ಸೇವಾ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆಂದು ಎಂದರು.
ಗಂಗಾವತಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಶರಣಪ್ಪ ಅವರು ಮಾತನಾಡಿ, ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮಕ್ಕಳಿಗಾಗಿ ಮೊರಾರ್ಜಿ ದೇಸಾಯಿ ವಸತಿ ಸಹಿತ ಶಾಲೆ, ವಸತಿ ನಿಲಯ, ಆಶ್ರಮ ಶಾಲೆ ಆರಂಭಿಸಲಾಗಿದೆ. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು, ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಲೀಗಲ್ ಕಂ ಪ್ರೋಬೇಷನ್ ಅಧಿಕಾರಿಗಳಾದ ಶಿವಲೀಲಾ ವನ್ನೂರ ಅವರು ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಹಾಗೂ ತಿದ್ದುಪಡಿ ಕಾಯ್ದೆ-2016ರ ಕುರಿತು ಮಾತನಾಡಿದರು. ರವಿಕುಮಾರ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಿದ್ದಾಪುರ ಗ್ರಾಮ ಪಂಚಾಯತ್‌ನ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ, ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ, ಅಧಿಕಾರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರೋಗ್ಯ ಸಹಾಯಕಿಯರು ಮತ್ತು ಗ್ರಾಮಸ್ಥರು ಪಾಲ್ಗೂಂಡಿದ್ದರು.

Get real time updates directly on you device, subscribe now.

Comments are closed.

error: Content is protected !!