ಪೊಲೀಸ್ ಪೇದೆ ನೇಮಕಾತಿ ಪರೀಕ್ಷೆ: ವಸ್ತ್ರ ಸಂಹಿತೆ ಪಾಲಿಸಲು ಸೂಚನೆ

Get real time updates directly on you device, subscribe now.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ೨೦೨೨-೨೩ನೇ ಸಾಲಿನ ಮಿಕ್ಕುಳಿದ ವೃಂದದ ಪೊಲೀಸ್ ಕಾನ್ಸ್ಟೇಬಲ್ (ಪುರುಷ & ಮಹಿಳಾ) ಮತ್ತು (ತೃತೀಯ ಲಿಂಗ ಪುರುಷ & ಮಹಿಳಾ) ಹಾಗೂ ಸೇವಾನಿರತ ಮತ್ತು ಬ್ಯಾಕ್‌ಲಾಗ್-೧೧೩೭ ಹುದ್ದೆಗಳ ನೇಮಕಾತಿಗೆ ಫೆಬ್ರವರಿ ೨೫ ರಂದು ಲಿಖಿತ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ನಿಗದಿಪಡಿಸಿದ ವಸ್ತ್ರ ಸಂಹಿತೆಯನ್ನು ಪಾಲಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅವರು ತಿಳಿಸಿದ್ದಾರೆ.
ಫೆ.೨೫ ರಂದು ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೧೨:೩೦ ಗಂಟೆಯವರೆಗೆ ರಾಜ್ಯಾದ್ಯಂತ ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು. ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆ ಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್.ಎಂ.ಎಸ್. ಮೂಲಕ ಮಾಹಿತಿಯನ್ನು ಡಿ.ಐ.ಜಿ.ಪಿ., ನೇಮಕಾತಿ ಹಾಗೂ ಸಮನ್ವಯಾಧಿಕಾರಿ, ಎಪಿಸಿ ನೇಮಕಾತಿ ಸಮಿತಿ, ಬೆಂಗಳೂರು ರವರ ಕಛೇರಿಯಿಂದ ನೀಡಲಾಗುವುದು ಹಾಗೂ ಕರೆಪತ್ರದ ಲಿಂಕ್ ಅನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ನಿಗಧಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಬೇಕು.
ಪರೀಕ್ಷೆಗೆ ಹಾಜರಾಗುವ ಪುರುಷ ಮತ್ತು ತೃತೀಯ ಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ, ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ಗಳನ್ನು ಧರಿಸಬೇಕು. ಚಿಕ್ಕ ಪಾಕೇಟ್‌ಗಳು, ದೊಡ್ಡ ಬಟನ್‌ಗಳು ಇರುವ ಶರ್ಟ್ಗಳನ್ನು ಧರಿಸುವಂತಿಲ್ಲ. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‌ಗಳನ್ನು ಧರಿಸುವಂತಿಲ್ಲ. ಪರೀಕ್ಷಾ ಕೇಂದ್ರಗಳಲ್ಲಿ ಶೂಗಳನ್ನು ನಿಷೇಧಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸಬೇಕು. ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ.
ಮಹಿಳಾ ಮತ್ತು ತೃತೀಯಲಿಂಗಿ ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬೂಟ್‌ಗಳು ಅಥವಾ ಬಟನ್‌ಗಳನ್ನು ಹೊಂದಿರುವ ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು/ಜೀನ್ಸ್ ಪ್ಯಾಂಟ್ ಅನ್ನು ಧರಿಸಬಾರದು. ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಅಭ್ಯರ್ಥಿಗಳು ಧರಿಸುವಂತೆ ನಿರ್ದೇಶಿಸಲಾಗಿದೆ. ಎತ್ತರವಾದ ಹಿಮ್ಮಡಿಯ ಶೂಗಳನ್ನು/ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿಭಾಗ ಹೊಂದಿರುವ ಶೂಗಳನ್ನಾಗಲಿ, ಚಪ್ಪಲಿಗಳನ್ನಾಗಲಿ ಧರಿಸಬಾರದು. ತೆಳುವಾದ ಅಡಿಭಾಗದ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ. ಮಹಿಳಾ ಮತ್ತು ತೃತೀಯಲಿಂಗಿ ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಿದೆ (ಮಂಗಳ ಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ) ಎಂದು ಪೊಲೀಸ್ ವರಿಷ್ಠಾಧಿಕಾರಿಗಳು  ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: