ಬಾಲ್ಯ ವಿವಾಹ: ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಬಾಲಕಿಯ ರಕ್ಷಣೆ
ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಯಲಬುರ್ಗಾ ತಾಲ್ಲೂಕಿನ ಗ್ರಾಮವೊಂದರ ಅಪ್ರಾಪ್ತ ಬಾಲಕಿಯನ್ನು ಬಾಲ್ಯ ವಿವಾಹದಿಂದ ರಕ್ಷಿಸಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿದೆ.
ಮಾರ್ಚ್ 30 ರಂದು ಕೊಪ್ಪಳ ತಾಲ್ಲೂಕಿನ ಹಿರೇಬೊಮ್ಮನಾಳ ಗ್ರಾಮದಲ್ಲಿ ನಡೆಯಲಿರುವ ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸಾಮೂಹಿಕ ವಿವಾಹದಲ್ಲಿ ಅದೇ ಗ್ರಾಮದ ವ್ಯಕ್ತಿಯೊಂದಿಗೆ ಯಲಬುರ್ಗಾ ತಾಲ್ಲೂಕಿನ ಗ್ರಾಮವೊಂದರ ಅಪ್ರಾಪ್ತ ಬಾಲಕಿಯ ವಿವಾಹವನ್ನು ನಿಶ್ಚಯಿಸಲಾಗಿತ್ತು. ಈ ಬಗ್ಗೆ ಮಕ್ಕಳ ಸಹಾಯವಾಣಿ-1098/112 ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು, ಹಿರೇಬೊಮ್ಮನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಂಗನವಾಡಿ ಮೇಲ್ವಿಚಾರಕಿಯರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ತುರ್ತಾಗಿ ಸ್ಥಳಕ್ಕೆ ತೆರಳಿ ಬಾಲಕಿಯ ಮನೆಗೆ ಭೇಟಿ ನೀಡಿ ವಿಚಾರಿಸಿದಾಗ, ಬಾಲಕಿಯ ವಿವಾಹವನ್ನು ನಿಶ್ಚಯ ಮಾಡಿರುವುದಾಗಿ ತಿಳಿದು ಬಂದಿತು. ಈ ಬಾಲಕಿಯ ವಯಸ್ಸಿನ ದೃಢೀಕರಣ ಪರಿಶೀಲಿಸಿದಾಗ 18 ವರ್ಷ ಪೂರ್ಣಗೊಳ್ಳದ ಕಾರಣ ಬಾಲ್ಯವಿವಾಹ ನಿಷೇಧ ಕಾಯ್ದೆ-2006 ರ ಬಗ್ಗೆ ಹಾಗೂ ಬಾಲ್ಯವಿವಾಹದ ದುಷ್ಪರಿಣಾಮಗಳ ಬಗ್ಗೆ ಪೋಷಕರಿಗೆ ತಿಳುವಳಿಕೆ ನೀಡಿ, ಬಾಲಕಿಯನ್ನು ರಕ್ಷಿಸಿ, ಮುಂದಿನ ಪೋಷಣೆ ಮತ್ತು ರಕ್ಷಣೆಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಯಿತು. ಸದ್ಯ ಬಾಲಕಿಗೆ ಬಾಲಕಿಯರ ಬಾಲಮಂದಿರದಲ್ಲಿ ತಾತ್ಕಾಲಿಕ ಆಶ್ರಯವನ್ನು ಕಲ್ಪಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.