ಲೋಕಸಭಾ ಚುನಾವಣೆ ಕರ್ತವ್ಯ ಅಚ್ಚುಕಟ್ಟಾಗಿ ನಿರ್ವಹಿಸಿ: ನಲಿನ್ ಅತುಲ್
ಲೋಕಸಭಾ ಚುನಾವಣೆಯ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ಪಿ.ಆರ್.ಓ., ಎ.ಪಿ.ಆರ್.ಓ.ಗಳಿಗೆ ಸೂಚನೆ ನೀಡಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಗಂಗಾವತಿ, ಯಲಬುರ್ಗಾ ಹಾಗೂ ಕೊಪ್ಪಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸೋಮವಾರ ನಡೆದ ಪಿ.ಆರ್.ಓ., ಎ.ಪಿ.ಆರ್.ಓ.ಗಳ ತರಬೇತಿ ಸ್ಥಳಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.
ಭಾರತ ಚುನಾವಣಾ ಆಯೋಗವು ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದು,. ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯಲಿದೆ. ಚುನಾವಣೆ ಕರ್ತವ್ಯದಲ್ಲಿ ಪಿ.ಆರ್.ಓ., ಎ.ಪಿ.ಆರ್.ಓ.ಗಳ ಪಾತ್ರವೂ ಪ್ರಮುಖವಾಗಿದ್ದು, ಚುನಾವಣಾ ಆಯೋಗದ ನಿರ್ದೇಶನಗಳನ್ನು ಓದಿಕೊಳ್ಳಬೇಕು. ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು. ಮಸ್ಟರಿಂಗ್, ಡಿಮಸ್ಟರಿಂಗ್ ಮತ್ತು ಚುನಾವಣಾ ತರಬೇತಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು, ಯಾವುದೇ ಸಮಸ್ಯೆಯಾಗದಂತೆ ಕಾರ್ಯನಿರ್ವಹಿಸಿ ಎಂದರು.
ತರಬೇತಿ ಕಾರ್ಯ ಹಾಗೂ ಮತಯಂತ್ರಗಳ ಭದ್ರತಾ ಕೊಠಡಿ ಪರಿಶೀಲನೆ: ಗಂಗಾವತಿಯ ಲಯನ್ಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಯಲಬುರ್ಗಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಪ್ರೌಢ ಶಾಲೆ ಆವರಣದಲ್ಲಿ ನಡೆದ ಪಿ.ಎ.ಆರ್.ಓ., ಎ.ಪಿ.ಆರ್.ಓ.ಗಳ ಮಸ್ಟರಿಂಗ್, ಡಿಮಸ್ಟರಿಂಗ್ ಮತ್ತು ಚುನಾವಣಾ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ಮತಯಂತ್ರಗಳ ಭದ್ರತಾ ಕೋಠಡಿಯನ್ನು ಸಹ ಪರಿಶೀಲಿಸಿದರು.
ಚುನಾವಣಾ ಸಿಬ್ಬಂದಿಗಳ ಊಟದ ವ್ಯವಸ್ಥೆ ಪರಿಶೀಲನೆ: ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಪ್ರೌಢ ಶಾಲೆ ಆವರಣದಲ್ಲಿ ಚುನಾವಣಾ ಸಿಬ್ಬಂದಿಗಳ ಊಟದ ವ್ಯವಸ್ಥೆಯನ್ನು ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ಖುದ್ದಾಗಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಗಂಗಾವತಿ, ಯಲಬುರ್ಗಾ ಹಾಗೂ ಕೊಪ್ಪಳ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು, ತಹಶೀಲ್ದಾರರು, ಪಿ.ಆರ್.ಓ., ಎ.ಪಿ.ಆರ್.ಓ.ಗಳು ಉಪಸ್ಥಿತರಿದ್ದರು.
Comments are closed.