ಏ.18 & 19ರಂದು ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗೆ ಸಿಇಟಿ ಪರೀಕ್ಷೆ: ನಿಷೇಧಾಜ್ಞೆ ಜಾರಿ
: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಇಂಜಿನಿಯರಿಂಗ್, ಕೃಷಿ, ವಿಜ್ಞಾನ, ವೆಟರ್ನರಿ, ಫಾರ್ಮಸಿ, ಹಾಗೂ ಬಿಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ಸಿಇಟಿ ಪರೀಕ್ಷೆಯು ಏಪ್ರಿಲ್ 18 ಮತ್ತು 19ರಂದು ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶಾತಿಯ ಸಿಇಟಿ ಪರೀಕ್ಷೆಯು ಏ.18 & 19ರ ಬೆಳಿಗ್ಗೆ 10.30 ರಿಂದ ಸಾಯಂಕಾಲ 4 ಗಂಟೆಯವರೆಗೆ ಜಿಲ್ಲೆಯ ಗಂಗಾವತಿ ಮತ್ತು ಕೊಪ್ಪಳದ ಒಟ್ಟು 14ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಅನುಕೂಲವಾಗುವಂತೆ ಹಾಗೂ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ಸಿ.ಆರ್.ಪಿ.ಸಿ 1973 ಕಲಂ 144ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ವಿವಿಧ ಷರತ್ತಿಗೆ ಒಳಪಟ್ಟು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
*ಪರೀಕ್ಷಾ ಕೇಂದ್ರಗಳ ವಿವರ:* ಗಂಗಾವತಿಯ ಸರ್ಕಾರಿ ಬಾಲಕರ ಪಿಯು ಕಾಲೇಜ್, ಪಂಪಾನಗರದ ಹೆಚ್.ಆರ್.ಸರೋಜಮ್ಮ ಬಾಲಕಿಯರ ಪಿಯು ಕಾಲೇಜ್, ಸರ್ಕಾರಿ ಎಸ್.ಎಮ್.ಎನ್.ಎಮ್ ಬಾಲಕಿಯರ ಪಿಯು ಕಾಲೇಜು ಹಾಗೂ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ,
ಸರಕಾರಿ ಬಾಲಕಿಯರ ಪಿಯು ಕಾಲೇಜ್, ಸರಕಾರಿ ಬಾಲಕರ ಪಿಯು ಕಾಲೇಜ್, ಭಾಗ್ಯನಗರದ ಸರಕಾರಿ ಪಿಯು ಕಾಲೇಜು, ಕುಷ್ಟಗಿ ರಸ್ತೆಯಲ್ಲಿರುವ ಕಾಳಿದಾಸ ಕಂಪೋಸಿಟ್ ಪಿಯು ಕಾಲೇಜು, ಭಾಗ್ಯನಗರದ ನವಚೇತನ ಪಿಯು ಸೈನ್ಸ್ ರೆಸಿಡೆನ್ಸಿಯಲ್ ಕಾಲೇಜು, ಕಿಡದಾಳನಲ್ಲಿರುವ ಶ್ರೀ ಶಾರದಾ ಪಿಯು ಕಾಲೇಜು, ಗವಿಮಠ ಕ್ಯಾಂಪಸ್ ನ ಎಸ್.ಜಿ.ವಿ.ವಿ.ಟಿ.ಎಸ್ ಪೂಜ್ಯಯ ಶ್ರೀ ಮರಿಶಾಂತವೀರ ಸ್ವಾಮೀಜಿ ಪಿಯು ಕಾಲೇಜ್, ಭಾಗ್ಯನಗರದ ಓಜನಹಳ್ಳಿ ರಸ್ತೆಯಲ್ಲಿರುವ ಜ್ಞಾನ ಬಂಧು ಪಿಯು ಕಾಲೇಜ್, ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜ್ ಹಾಗೂ ಲಯನ್ಸ್ ಸ್ವಾಮಿ ವಿವೇಕಾನಂದ ಇಂಗ್ಲೀಷ್ ಮೀಡಿಯಂ ಪ್ರೈಮರಿ ಅಂಡ್ ಹೈ ಸ್ಕೂಲ್ ಸೇರಿದಂತೆ ಈ ಎಲ್ಲಾ 14 ಪರೀಕ್ಷಾ ಕ್ಷೇದ್ರಗಳಲ್ಲಿ ಇಂಜಿನಿಯರಿಂಗ್, ಕೃಷಿ, ವಿಜ್ಞಾನ, ವೆಟರ್ನರಿ, ಫಾರ್ಮಸಿ, ಹಾಗೂ ಬಿಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ಸಿಇಟಿ ಪರೀಕ್ಷೆ ಏ.18 ಮತ್ತು 19 ರಂದು ಬೆಳಿಗ್ಗೆ 10.30 ರಿಂದ ಸಾಯಂಕಾಲ 4 ಗಂಟೆಯವರೆಗೆ ನಡೆಯಲಿವೆ.
ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪತ್ರ ಪಡೆದ ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
Comments are closed.