ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕಾರ್ಯನಿರ್ವಹಿಸಿ: ಹೇಮ ಪುಷ್ಪ ಶರ್ಮಾ

0

Get real time updates directly on you device, subscribe now.

ಲೋಕಸಭೆ ಚುನಾವಣೆ: ಸಾಮಾನ್ಯ ವೀಕ್ಷಕರಿಂದ ಸಭೆ

ಕೊಪ್ಪಳ, : ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಹಾಗೂ ಎಲ್ಲಾ ತಂಡಗಳು ಭಾರತ ಚುನಾವಣಾ ಆಯೋಗದ ನಿರ್ದೇಶನಗಳಂತೆ ಕಾರ್ಯನಿರ್ವಹಿಸಬೇಕು ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣಾ ಸಾಮಾನ್ಯ ವೀಕ್ಷಕರಾದ ಹೇಮ ಪುಷ್ಪ ಶರ್ಮಾ (ಐ.ಎ.ಎಸ್) ಅವರು ಹೇಳಿದರು.

ಲೋಕಸಭೆ ಚುನಾವಣೆ-2024ರ ಹಿನ್ನೆಲೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಲು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್, ಶೌಚಾಲಯ, ರ‍್ಯಾಂಪ್ ಸೇರಿದಂತೆ ಇತರ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚಿನ ಗಮನ ಹರಿಸಬೇಕು. ಇಂದು ನಾನು 16 ಮತಗಟ್ಟೆಗಳಿಗೆ ಭೇಟಿ ನೀಡಿದ್ದು, ಅಲ್ಲಿ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಿರುವುದು ಸಂತಸ ತಂದಿದೆ ಎಂದರು.

ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾನದ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಬಗ್ಗೆ ಮಾಹಿತಿ ಪಡೆದ ಸಾಮಾನ್ಯ ವೀಕ್ಷಕರು, ನಿಯಮಿತವಾಗಿ ಅರಿವು ಕಾರ್ಯಕ್ರಮಗಳನ್ನು ಕೈಗೊಂಡು ಮತದಾನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ 7 ತಾಲ್ಲೂಕುಗಳು, 21 ಹೋಬಳಿ, 595 ಜನವಸತಿ ಗ್ರಾಮಗಳು, 9 ನಗರ ಸ್ಥಳೀಯ ಸಂಸ್ಥೆಗಳು, 153 ಗ್ರಾಮ ಪಂಚಾಯತ್‌ಗಳು, 5 ವಿಧಾನಸಭಾ ಕ್ಷೇತ್ರಗಳು, 1 ಜಿಲ್ಲಾ ಪಂಚಾಯತ್ ಹಾಗೂ 7 ತಾಲ್ಲೂಕು ಪಂಚಾಯಿತಿಗಳಿದ್ದು, 1,317 ಮತಗಟ್ಟೆಗಳಿವೆ. ಇದರ ಜೊತೆಗೆ 8-ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ರಾಯಚೂರು ಜಿಲ್ಲೆಯ ಸಿಂಧನೂರು ಮತ್ತು ಮಸ್ಕಿ ಹಾಗೂ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ವಿಧಾನಸಭಾ ಕ್ಷೇತ್ರಗಳು ಒಳಪಡುತ್ತದೆ. 8-ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 2,045 ಮತಗಟ್ಟೆಗಳಿವೆ ಎಂದು ಅವರು ಮಾಹಿತಿ ನೀಡಿದರು.

ಎಂಟು ವಿಧಾನಸಭಾ ಕ್ಷೇತ್ರಗಳಿಗೆ ತಲಾ ಒಬ್ಬರಂತೆ ಮತ್ತು ಅಪರ ಜಿಲ್ಲಾಧಿಕಾರಿಗಳು ಸೇರಿ ಒಟ್ಟು 9 ಅಧಿಕಾರಿಗಳನ್ನು ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ದೂರು ಸ್ವೀಕರಿಸಲು ಜಿಲ್ಲಾಡಳಿತ ಭವನದಲ್ಲಿ ಕಂಟ್ರೋಲ್ ರೂಮ್ ಸಹಾಯವಾಣಿ 1950 ಪ್ರಾರಂಭಿಸಲಾಗಿದೆ. ಅದಲ್ಲದೆ ಚುನಾವಣಾ ವೆಚ್ಚ ವೀಕ್ಷಣಾ ತಂಡ, ಕಂಪ್ಲೇಂಟ್ ಮಾನಿಟರಿಂಗ್ ಸೆಲ್, ಮೀಡಿಯಾ ಸರ್ಟಿಫಿಕೇಷನ್ ಮತ್ತು ಮಾನಿಟರಿಂಗ್ ಕಮಿಟಿ, ಎಂಸಿಸಿ ಸೆಲ್ ಹಾಗೂ ಇತರ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಚೆಕ್‌ಪೋಸ್ಟ್, 49 ಫ್ಲೈಯಿಂಗ್ ಸ್ಕ್ವಾಡ್ಸ್, 24 ಎಸ್.ಎಸ್.ಟಿ ಹಾಗೂ ಇತರ ತಂಡಗಳನ್ನು ನೇಮಕ ಮಾಡಿದ್ದು ಎಲ್ಲಾ ತಂಡಗಳು ಸಹ ಈಗಾಗಲೇ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಚುನಾವಣಾ ಸಿದ್ಧತೆಗಳು ಹಾಗೂ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿದರು.

ಜಿಲ್ಲೆಯಲ್ಲಿ ತೆರೆದಿರುವ ಚೆಕ್‌ಪೋಸ್ಟ್, ಎಸ್.ಎಸ್.ಟಿ., ವಿ.ಎಸ್.ಟಿ., ಎಫ್.ಎಸ್.ಟಿ.ಗಳು, ಮತಗಟ್ಟೆಗಳು, ಮತದಾನ ಕಾರ್ಯಕ್ಕೆ ನೇಮಕಗೊಂಡ ಪಿ.ಆರ್.ಓ., ಎ.ಪಿ.ಆರ್.ಓ. ಹಾಗೂ ಪಿಓಗಳ ಬಗ್ಗೆ ಮಾಹಿತಿ ಪಡೆದ ಚುನಾವಣಾ ಸಾಮಾನ್ಯ ವೀಕ್ಷಕರಾದ ಹೇಮ ಪುಷ್ಪ ಶರ್ಮಾ ಅವರು ಜಿಲ್ಲಾಡಳಿತದ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಭೆಯಲ್ಲಿ ಎಂ.ಸಿ.ಸಿ ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೇಮಂತ ಕುಮಾರ ಸೇರಿದಂತೆ ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು, ವಿವಿಧ ತಂಡಗಳು, ಪೊಲೀಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Leave A Reply

Your email address will not be published.

error: Content is protected !!
%d bloggers like this: