ಮುಕ್ತ, ನ್ಯಾಯಸಮ್ಮತ ಚುನಾವಣೆಗಾಗಿ ಮೇ 5 ರಿಂದ ಮೇ 8 ರವರೆಗೆ ನಿಷೇಧಾಜ್ಞೆ ಜಾರಿ
: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ನಿಮಿತ್ತ ಶಾಂತ, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಯುವ ಸಂಬAಧವಾಗಿ ಮೇ 05 ರಿಂದ 08 ರವರೆಗೆ ಜಿಲ್ಲೆಯಾದ್ಯದಂತ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.
ನಿಷೆದಾಜ್ಞೆ ಜಾರಿ ಅವಧಿಯಲ್ಲಿ ಕೊಪ್ಪಳ ಜಿಲ್ಲೆಯ ವ್ಯಾಪ್ತಿಯಲ್ಲಿ 05 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ/ ಬೆಂಬಲಿಗರು ಸೇರಿ 05 ಜನರಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರಬಾರದು. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಗ್ಗ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.
ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ. ಈ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್‌ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಬಂಧಿಸಿದೆ. ಕಲ್ಲುಗಳನ್ನು, ಕಾರಪಧಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಮತಗಟ್ಟೆ ಕೇಂದ್ರಗಳ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.
ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು , ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು, ಕಂಡು ಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂಥಹ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬAಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು. ಮನುಷ್ಯ ರೂಪದ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ ಅಥವಾ ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ.
ಎಲ್ಲಾ ಮತಗಟ್ಟೆ ಕೇಂದ್ರಗಳ ಸುತ್ತಲಿನ 100 ಮೀಟರ್ ವ್ಯಾಪ್ತಿಯ ಸ್ಥಳ ನಿರ್ಬಂಧಿತ ಪ್ರದೇಶವಾಗಿದ್ದು, ಈ ಪ್ರದೇಶದಲ್ಲಿ ಖಾಸಗಿ ವಾಹನಗಳ ನಿಲುಗಡೆ, ಧ್ವನಿವರ್ಧಕ ಬಳಕೆ ಮುಂತಾದವುಗಳನ್ನು ನಿಷೇಧಿಸಿದೆ ಹಾಗೂ ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯಲ್ಲಿ ಪಕ್ಷದ ಪ್ರಚಾರ, ಮತದ ಓಲೈಕೆ ಮುಂತಾದವುಗಳನ್ನು ಮಾಡುವಂತಿಲ್ಲ ಮತ್ತು ಈ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು ಸನ್ನೆ ಅಥವಾ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.
ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ, ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವಾಗಲಿ ಮತ್ತು ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದAತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನಿಯಮಗಳನ್ನು ಪಾಲಿಸಬೇಕು.
ನಿಷೆದಾಜ್ಞೆ ಜಾರಿ ಸಮಯದಲ್ಲಿ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳು ಬಾಗಿಲಿನಿಂದ ಬಾಗಿಲಿಗೆ ಹೋಗಿ ಮತಯಾಚಿಸುವ ಸಲುವಾಗಿ ಮನೆಯಿಂದ ಮನೆಗೆ ಹೋಗುವುದು ನಿರ್ಬಂಧಿಸಿರುವುದಿಲ್ಲ. ಆದರೆ 5 ಜನರಿಗಿಂತ ಹೆಚ್ಚಿನ ಗುಂಪು ಕೂಡಿಕೊಂಡು ಮನೆಯಿಂದ ಮನೆಗೆ ಹೋಗಿ ಮತಯಾಚಿಸುವುದನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
Comments are closed.