ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ : ನಿಷೇಧಾಜ್ಞೆ ಜಾರಿ
ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-೨೦೨೪ರ ನಿಮಿತ್ತ ಶಾಂತ, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಯುವ ಸಂಬಂಧವಾಗಿ ಪ್ರಜಾ ಪ್ರಾತಿನಿಧ್ಯ ಕಾಯ್ದೆ ೧೯೫೧ ರ ೧೨೬ ನೇ ಪ್ರಕರಣದ ಮೇರೆಗೆ ಜೂನ್ ೦೧ ರಿಂದ ೦೩ ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಜೂನ್ ೦೩ರಂದು ಜರುಗಲಿರುವ ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ಹಿನ್ನೆಲೆಯಲ್ಲಿ ಮತದಾನ ಅಂತ್ಯಗೊಳ್ಳುವ ೪೮ ಗಂಟೆಗಳ ಪೂರ್ವದಲ್ಲಿ ರಾಜಕೀಯ ಪಕ್ಷಗಳ / ಅಭ್ಯರ್ಥಿಗಳ ಬಹಿರಂಗ ಪ್ರಚಾರ / ಮೆರವಣಿಗೆಗಳು ಅಂತ್ಯಗೊಳ್ಳುತ್ತವೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕೊಪ್ಪಳ ಜಿಲ್ಲೆಯಾದ್ಯಂತ ಜೂನ್ ೧ರ ಸಾಯಂಕಾಲ ೬ ಗಂಟೆಯಿಂದ ಜೂನ್ ೩ ರ ಮಧ್ಯರಾತ್ರಿಯವರೆಗೆ ವಿವಿಧ ಷರತ್ತುಗಳಿಗೊಳಪಟ್ಟು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಿಷೆಧಾಜ್ಞೆ ಅವಧಿಯಲ್ಲಿ ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ೦೫ ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ/ ಬೆಂಬಲಿಗರು ಸೇರಿ ೦೫ ಜನರಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರಬಾರದು. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಗ್ಗ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.
ಮತಗಟ್ಟೆ ಕೇಂದ್ರಗಳ ೧೦೦ ಮೀಟರ್ ವ್ಯಾಪ್ತಿಯ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ. ಈ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್‌ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಬಂಧಿಸಿದೆ. ಕಲ್ಲುಗಳನ್ನು, ಖಾರ ಪದಾರ್ಥ ಇಲ್ಲವೇ ಸ್ಪೋಟಕ ವಸ್ತುಗಳು, ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಮತಗಟ್ಟೆ ಕೇಂದ್ರಗಳ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.
ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡು ಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂಥಹ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು. ಮನುಷ್ಯ ರೂಪದ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ ಅಥವಾ ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ.
ಎಲ್ಲಾ ಮತಗಟ್ಟೆ ಕೇಂದ್ರಗಳ ಸುತ್ತಲಿನ ೧೦೦ ಮೀಟರ್ ವ್ಯಾಪ್ತಿಯ ಸ್ಥಳ ನಿರ್ಬಂಧಿತ ಪ್ರದೇಶವಾಗಿದ್ದು, ಈ ಪ್ರದೇಶದಲ್ಲಿ ಖಾಸಗಿ ವಾಹನಗಳ ನಿಲುಗಡೆ, ಧ್ವನಿವರ್ಧಕ ಬಳಕೆ ಮುಂತಾದವುಗಳನ್ನು ನಿಷೇಧಿಸಿದೆ ಹಾಗೂ ಮತಗಟ್ಟೆ ಕೇಂದ್ರಗಳ ೧೦೦ ಮೀಟರ್ ವ್ಯಾಪ್ತಿಯಲ್ಲಿ ಪಕ್ಷದ ಪ್ರಚಾರ, ಮತದ ಓಲೈಕೆ ಮುಂತಾದವುಗಳನ್ನು ಮಾಡುವಂತಿಲ್ಲ ಮತ್ತು ಈ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು ಸನ್ನೆ ಅಥವಾ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.
ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ, ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಮತ್ತು ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
ಈ ಆದೇಶವು ಶವ ಸಂಸ್ಕಾರ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನಿಯಮಗಳನ್ನು ಪಾಲಿಸಬೇಕು.
ನಿಷೆಧಾಜ್ಞೆ ಸಮಯದಲ್ಲಿ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳು ಬಾಗಿಲಿನಿಂದ ಬಾಗಿಲಿಗೆ ಹೋಗಿ ಮತಯಾಚಿಸುವ ಸಲುವಾಗಿ ಮನೆಯಿಂದ ಮನೆಗೆ ಹೋಗುವುದು ನಿರ್ಬಂಧಿಸಿರುವುದಿಲ್ಲ. ಆದರೆ ೫ ಜನರಿಗಿಂತ ಹೆಚ್ಚಿನ ಗುಂಪು ಕೂಡಿಕೊಂಡು ಮನೆಯಿಂದ ಮನೆಗೆ ಹೋಗಿ ಮತ ಯಾಚಿಸುವುದನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
Comments are closed.