ವಿಜೃಂಭಣೆಯಿಂದ ಜರುಗಿದ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ
: ಕೊಪ್ಪಳ ತಾಲೂಕಿನ ಹುಲಿಗೆ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಶುಕ್ರವಾರ ಅಪಾರ ಜನ ಸಾಗರದ ನಡುವೆ ಮಹಾರಥೋತ್ಸವವು ವಿಜೃಂಭಣೆಯಿಂದ ಜರುಗಿತು.
ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿಯ ಪ್ರಸಕ್ತ ಸಾಲಿನ ಜಾತ್ರಾ ಮಹೋತ್ಸವದ ಅಂಗವಾಗಿ ಮೇ 30ರಿಂದ ಜೂನ್ 3ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಜಾತ್ರೆಯ ಮುಖ್ಯ ಭಾಗವಾದ ಮಹಾರಥೋತ್ಸವವು ಮೇ 31ರ ಸಾಯಂಕಾಲ 5-30 ಗಂಟೆ ಸುಮಾರಿಗೆ ಲಕ್ಷಾಂತರ ಭಕ್ತಾಧಿಗಳ ಸಮೂಹದ ನಡುವೆ ಅದ್ದೂರಿಯಾಗಿ ನಡೆಯಿತು.
ಸುಮಾರು ಐದು ಲಕ್ಷಕ್ಕೂ ಅಧಿಕ ಭಕ್ತಾದಿಗಳು ಭಾಗಿ: ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವದಲ್ಲಿ ಭಕ್ತರ ಉಧೋ ಉಧೋ ಘೋಷಣೆ ಮುಗಿಲು ಮುಟ್ಟಿತ್ತು. ಭಕ್ತವೃಂದ ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಸಮರ್ಪಿಸಿ, ಭಕ್ತಿ ಭಾವ ಮೆರೆದರು. ಕರ್ನಾಟಕದ ವಿವಿಧ ಜಿಲ್ಲೆಗಳ ಮತ್ತು ಆಂದ್ರಪ್ರದೇಶದ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ ಹಾಗೂ ಇತರೆ ರಾಜ್ಯಗಳ ಸುಮಾರು ಐದು ಲಕ್ಷಕ್ಕೂ ಅಧಿಕ ಭಕ್ತಾದಿಗಳು ಜಾತ್ರೆಗೆ ಆಗಮಿಸಿ, ಮಹಾರಥೋತ್ಸವವನ್ನು ಕಣ್ತುಂಬಿಕೊಂಡರು.
ಅಚ್ಚುಕಟ್ಟು ವ್ಯವಸ್ಥೆ: ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯು ಭಕ್ತಾದಿಗಳಿಗೆ ಕುಡಿಯುವ ನೀರು, ಶೌಚಾಲಯ, ಸ್ನಾನ ಗೃಹ, ಸಾರಿಗೆ ಮತ್ತು ವಾಹನಗಳ ಪಾರ್ಕಿಂಗ್ ವ್ಯವಸ್ಥೆಗಳನ್ನು ಕಲ್ಪಿಸಿ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿದೆ.
ರಥೋತ್ಸವ ಸಂದರ್ಭದಲ್ಲಿ ಕೊಪ್ಪಳ ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಹುಲಿಗೆಮ್ಮ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ್ ಸುತಗುಂಡಿ ಹಾಗೂ ಕೊಪ್ಪಳ ಮತ್ತು ಗಂಗಾವತಿ ಡಿವೈಎಸ್ಪಿಗಳು ಉಪಸ್ಥಿತರಿದ್ದರು.
Comments are closed.