ಇಲಾಖೆಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ: ಕೆ.ಪಿ ಮೋಹನ್ ರಾಜ್

Get real time updates directly on you device, subscribe now.

 ಇಲಾಖೆಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಬೆಂಗಳೂರು ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು, ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತಿಯ ಆಡಳಿತಾಧಿಕಾರಿಗಳಾದ ಕೆ.ಪಿ ಮೋಹನ್ ರಾಜ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿಯ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಜೂನ್ 24ರಂದು ಏರ್ಪಡಿಸಲಾಗಿದ್ದ ಕೊಪ್ಪಳ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಕುಡಿಯುವ ನೀರು ಸರಬರಾಜು ಸಮಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆಯುಷ್ ಇಲಾಖೆಗಳ ಜಿಲ್ಲಾ ಆರೋಗ್ಯ ಸಮನ್ವಯ ಸಮಿತಿಯ, ಜಿಲ್ಲಾ ಮಟ್ಟದ ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಮಿತಿ ಮತ್ತು ಕೊಪ್ಪಳ ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗಾಗಿ ವಿದ್ಯಾರ್ಥಿಗಳ ಶಿಕ್ಷಣ ಮತ್ತು ಸೌಲಭ್ಯ ಅಭಿವೃದ್ಧಿ ಸಮಿತಿ ಸೇರಿದಂತೆ ಜಿಲ್ಲಾ ಮಟ್ಟದ ಉಪಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಹಾಗೂ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲು ಅನುಕೂಲವಾಗುವಂತೆ ವಿವಿಧ ಇಲಾಖೆಗಳನ್ನೊಳಗೊಂಡ ಜಿಲ್ಲಾ ಮಟ್ಟದ ಉಪಸಮಿತಿಗಳನ್ನು ರಚಿಸಲಾಗಿದ್ದು, ಎಲ್ಲಾ ಸಮಿತಿಗಳು ತಮ್ಮ ಹಂತದಲ್ಲಿ ಪ್ರತಿ ಮಾಹೆಯಲ್ಲಿ ಕಡ್ಡಾಯವಾಗಿ ಸಭೆ ಮಾಡಬೇಕು. ಇದರಿಂದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿಗೆ ವೇಗ ಸಿಗುವಂತಾಗುತ್ತದೆ. ಅಲ್ಲದೆ ಇಲಾಖೆಗಳಿಂದ ಸಾರ್ವಜನಿಕರಿಗೆ ನೀಡಲಾಗುವ ಸೇವೆಗಳು, ಯೋಜನೆ ಮತ್ತು ಇತರೆ ಕಾರ್ಯಕ್ರಮಗಳು ಸಮರ್ಪಕವಾಗಿ ಅನುಷ್ಠಾಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆ ಎಲ್ಲಾ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗುತ್ತಿದೇ ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಮಳೆಗಾಲ ಹಿನ್ನೆಲೆಯಲ್ಲಿ ಪೈಪ್‌ಲೈನ್ ಹಾಗೂ ಬೋರವೆಲ್‌ಗಳಲ್ಲಿ ಕಲುಷಿತ ನೀರು ಹೋಗದಂತೆ ನೋಡಿಕೊಳ್ಳಬೇಕು. ಯಾವುದೇ ರೀತಿಯ ದುರಸ್ಥಿಗಳಿದ್ದಲ್ಲಿ ತ್ವರಿತವಾಗಿ ಕ್ರಮಕೈಗೊಳ್ಳಬೇಕು. ಜಾಕ್ವೆಲ್ ಹಾಗೂ ನೀರು ಸರಬರಾಜು ಮೂಲಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನಾ ವರದಿ ಸಲ್ಲಿಸಬೇಕು. ನೀರು ಪೂರೈಕೆಗೂ ಮುನ್ನ ನೀರಿ ಪರೀಕ್ಷೆಗಳನ್ನು ಕಡ್ಡಾಯವಾಗಿ ಮಾಡಿ. ಪರೀಕ್ಷೆಯಲ್ಲಿ ಯಾವ ನೀರು ಕುಡಿಯಲು ಯೋಗ್ಯವಿಲ್ಲವೋ ಅಂತಹ ನೀರು ಸರಬರಾಜು ಬಂದ್ ಮಾಡಲು ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಮಾತನಾಡಿ, ಕೆರೆ, ಕೊಳವೆ ಬಾವಿಗಳು ಸೇರಿ ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 3000 ಕುಡಿಯುವ ನೀರಿ ಸರಬರಾಜಿನ ಮೂಲಗಳಿದ್ದು, ಪ್ರತಿ ಮಾಹಿಯಲ್ಲಿ 1000 ನೀರು ಪರೀಕ್ಷೆಗಳನ್ನು ಕೈಗೊಳ್ಳಲಾಗುತ್ತಿದೆ. ಪರೀಕ್ಷೆಯಲ್ಲಿ ಕುಡಿಯಲು ಯೋಗ್ಯವಲ್ಲದ ನೀರು ಅಥವಾ ಕಲುಷಿತ ನೀರು ಎಂದು ದೃಢಪಟ್ಟ ತಕ್ಷಣವೇ ಅಂತಹ ನೀರು ಸರಬರಾಜನ್ನು ನಿಲ್ಲಿಸಲಾಗುತ್ತಿದೆ ಎಂದು ಹೇಳಿದರು.
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬಿತ್ತನೆಗೆ ಅವಶ್ಯವಿರುವ ಬಿತ್ತನೆ ಬೀಜ, ಗೊಬ್ಬರ ಹಾಗೂ ಈಗಾಗಲೇ ಬಿತ್ತನೆಯಾದ ಬೆಳೆಗಳಿಗೆ ಬೇಕಾಗುವ ರಸಗೊಬ್ಬರವನ್ನು ರೈತರ ಬೇಡಿಕೆಯಂತೆ ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು. ಜಾನುವಾರುಗಳ ಕಾಲು-ಬಾಯಿ ರೋಗ ಹಾಗೂ ಇತರೆ ಕಾಯಿಲೆಗಳ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಕುರಿ, ಮೇಕೆ, ಎಮ್ಮೆ, ದನಕರುಗಳಿಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು. ಲಸಿಕೆಯ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು ಎಂದು ಕೃಷಿ ಹಾಗೂ ಪಶುಪಾಲನಾ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಜನವರಿ 1 ರಿಂದ ಜೂನ್ 24ರವರೆಗೆ ವಾಡಿಕೆ ಮಳೆ 147 ಮಿಮಿ ಇದ್ದು ವಾಸ್ತವಿಕವಾಗಿ 236 ಮಿಮಿ ಸುರಿದು ಶೇ.60ರಷ್ಟು ಹೆಚ್ಚಿನ ಮಳೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 3,08,000 ಹೆಕ್ಟೇರ್ ಪ್ರದೇಶದಲ್ಲಿನ ಬಿತ್ತನೆ ಗುರಿಯ ಪೈಕಿ ಇದುವರೆಗೆ 1,58,00 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿ ಶೇ.51ರಷ್ಟು ಪ್ರಗತಿಯಾಗಿದೆ. ಬಾಕಿ ಉಳಿದ ಬಿತ್ತನೆ ಕಾರ್ಯವು ಚುರುಕುಗೊಂಡಿದ್ದು, ರಸಗೊಬ್ಬರ ಹಾಗೂ ಬಿತ್ತನೆ ಬೀಜಕ್ಕಾಗಿ ಯಾವುದೇ ಕೊರತೆ ಇರುವಿದಿಲ್ಲ ಎಂದು ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್ ಅವರು ಸಭೆಗೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಒಟ್ಟು 12 ಲಕ್ಷ ಜಾನುವಾರುಗಳಿದ್ದು, 6.25 ಲಕ್ಷ ಕುರಿಗಳು, 1.72 ಲಕ್ಷ ಮೇಕೆ, 2.31 ಲಕ್ಷ ದನಕರುಗಳು ಹಾಗೂ 60 ಸಾವಿರಕ್ಕೂ ಅಧಿಕ ಎಮ್ಮೆಗಳಿವೆ. ಪ್ರಸ್ತುತ ಕುರಿ ಮೇಕೆಗಳಿಗೆ ಇಟಿ ಲಸಿಕೆಯನ್ನು ವಿತರಣೆ ಮಾಡಲಾಗಿದೆ. ಅಲ್ಲದೇ ಜಾನುವಾರುಗಳಿಗೆ ಅವಶ್ಯಕತೆಯಂತೆ ಅಗತ್ಯ ಲಸಿಕೆ, ಔಷಧಿಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪಶು ಇಲಾಖೆ ಉಪನಿರ್ದೇಶಕರಾದ ಡಾ ಪಿ.ಎಂ.ಮಲ್ಲಯ್ಯ ಅವರು ಮಾಹಿತಿ ನೀಡಿದರು.
ಕೊಪ್ಪಳ ಜಿಲ್ಲೆಯ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶವು ಶೇ.64ರಷ್ಟು ಬಂದಿದ್ದು, ಈ ಬಗ್ಗೆ ಅಧಿಕಾರಿಗಳು ಎಚ್ಚೆತ್ತುಕೊಂಡು ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಬೇಕು. ಈ ಬಾರಿಯ ಎಸ್.ಎಸ್.ಎಲ್.ಸಿ ಫಲಿತಾಂಶ ಕುಸಿದಿರುವುದಕ್ಕೆ ಕಾರಣ, ಕಳೆದ ನಾಲ್ಕು ವರ್ಷಗಳ ಸಾಧನೆಯ ವಿವರದೊಂದಿಗೆ ಸೂಕ್ತ ವರದಿ ಸಲ್ಲಿಸುವಂತೆ ಬೆಂಗಳೂರು ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು, ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತಿಯ ಆಡಳಿತಾಧಿಕಾರಿಗಳಾದ ಕೆ.ಪಿ ಮೋಹನ್ ರಾಜ್ ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳಾದ ಡಿ.ಮಂಜುನಾಥ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕಾವ್ಯರಾಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ ಟಿ.ಲಿಂಗರಾಜು, ಕಿಮ್ಸ್ ನಿರ್ದೇಶಕರಾದ ಡಾ ವೈಜನಾಥ ಇಟಗಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ರೀಶೈಲ ಬಿರಾದಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: