ಹಾಸ್ಟೆಲ್‌ಗಳಲ್ಲಿ ಅವ್ಯವಸ್ಥೆ ಕಂಡುಬಂದಲ್ಲಿ ನಿರ್ಧಾಕ್ಷಿಣ್ಯ ಕ್ರಮ: ನಲಿನ್ ಅತುಲ್

Get real time updates directly on you device, subscribe now.

: ಶುಚಿತ್ವದ ಬಗ್ಗೆ ಹೆಚ್ಚಿನ ಗಮನ ಹರಿಸುವ ಮೂಲಕ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಆರೋಗ್ಯ ರಕ್ಷಣೆ ನೀಡಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸೂಚನೆ ನೀಡಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಕ್ರೈಸ್ ವಸತಿ ಶಾಲೆಗಳ ಖಾಯಂ/ ಹೊರಸಂಪನ್ಮೂಲ ಡಿ-ಗ್ರೂಪ್ ಸಿಬ್ಬಂದಿಗಳಿಗೆ ಅಡುಗೆ ತಯಾರಿಸುವ ಮತ್ತು ಸ್ವಚ್ಛತೆಯನ್ನು ಕಾಪಾಡುವ ಕುರಿತು ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಜುಲೈ 18ರಂದು ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೊಪ್ಪಳ ಜಿಲ್ಲೆಯ ಎಲ್ಲಾ ಹಾಸ್ಟೆಲ್‌ಗಳಲ್ಲಿ ಸ್ವಚ್ಛತೆ ಇಟ್ಟುಕೊಳ್ಳಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಹಾಸ್ಟೆಲ್ ವಾರ್ಡನ್ ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಕಾನೂನಿನ ಚೌಕಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಿರಲಿ. ಮಕ್ಕಳಿಗೆ ಶಿಕ್ಷಣ ಮತ್ತು ಆರೋಗ್ಯ ಅತ್ಯಂತ ಮುಖ್ಯವಾಗಿದ್ದು, ಹಾಸ್ಟೆಲ್ ಮಕ್ಕಳ ಉತ್ತಮ ಶಿಕ್ಷಣ ನೀಡುವುದರ ಜೊತೆಗೆ ಅವರ ಆರೋಗ್ಯದ ಬಗ್ಗೆಯೂ ವಿಶೇಷ ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳಿಗೆ ನೀಡುವ ಆಹಾರ ತಯಾರಿಕೆಯಲ್ಲಿ ಸ್ವಚ್ಛತೆ, ಆರೋಗ್ಯ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು.  ಈ ಹಿನ್ನೆಲೆಯಲ್ಲಿ ತರಬೇತಿಯಲ್ಲಿ ಆರೋಗ್ಯ ಮತ್ತು ಆಹಾರ ಸುರಕ್ಷತಾ ಅಂಕಿತ ಇಲಾಖೆಯ ಅಧಿಕಾರಿಗಳು ನೀಡುವ ಕ್ರಮಗಳನ್ನು ಸರಿಯಾಗಿ ತಿಳಿದುಕೊಂಡು ಅವುಗಳನ್ನು ಚಾಚೂ ತಪ್ಪಿದೇ ಪಾಲಿಸಬೇಕು. ಯಾವುದೇ ಸಮಸ್ಯೆ ಉಂಟಾದರೆ ಸಂಬಂಧಪಟ್ಟ ತಾಲ್ಲೂಕು ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಮಾತನಾಡಿ, ಹಾಸ್ಟೆಲ್ ಒಳಾಂಗಣ ಮತ್ತು ಹೊರಾಂಗಣಗಳನ್ನು ಸ್ವಚ್ಛವಾಗಿಟ್ಟುಕೊಳ್ಳಿ. ಶೌಚಾಲಯ, ಸ್ನಾನದ ಕೊಠಡಿಗಳಲ್ಲಿಯೂ ಸಹ ಸ್ವಚ್ಛತೆ ಕಾಪಾಡಿಕೊಳ್ಳಿ. ಮಕ್ಕಳಿಗೆ ಉತ್ತಮ ಗುಣಮಟ್ಟದ ಆಹಾರ ನೀಡಬೇಕು. ಅಡುಗೆ ಮತ್ತು ಡಿ ಗ್ರೂಪ್ ನೌಕರರು ಮೊದಲು ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಂಡು ಕೆಲಸ ನಿರ್ವಹಿಸಬೇಕು. ಹಾಸ್ಟೆಲ್ ವ್ಯವಸ್ಥೆಗಳನ್ನು ಪರಿಶೀಲನೆಗಾಗಿ ಡಿಸಿ ಅವರು ಹಾಗೂ ತಾವು ಅನಿರೀಕ್ಷಿತವಾಗಿ ಭೇಟಿ ನೀಡಲಿದ್ದು, ಈ ವೇಳೆ ಯಾವುದೇ ರೀತಿಯ ಲೋಪ ಕಂಡರೆ ಕ್ರಮ ಕೈಗೊಳ್ಳುವುದಾಗಿ ಸೂಚನೆ ನೀಡಿದರು.
ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರಾಜು ತಳವಾರ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಿವಾನಂದ ಪೂಜಾರ ಅವರು ಹಾಸ್ಟೆಲ್‌ಗಳಲ್ಲಿ ಸ್ವಚ್ಛತೆ ಕಾಪಾಡುವುದು, ಡೆಂಗಿ, ಚಿಕನ್‌ಗೂನ್ಯ ರೋಗಗಳಿಂದ ಆರೋಗ್ಯ ರಕ್ಷಣೆ ಕುರಿತು ತಿಳಿಸಿದರು.
ಆಹಾರ ಸುರಕ್ಷತಾ ಇಲಾಖೆಯ ಕೃಷ್ಣ ಅವರು, ಆಹಾರ ಸುರಕ್ಷತೆಯ ಬಗ್ಗೆ ವಿವರವಾಗಿ ತರಬೇತಿ ನೀಡಿದರು. ಶಶಿಧರ್ ಅವರು ನಿರೂಪಿಸಿದರು.
ಕಾರ್ಯಾಗಾರದಲ್ಲಿ ವಿವಿಧ ವಸತಿ ಶಾಲೆಗಳು, ವಸತಿ ನಿಲಯಗಳ ನಿಲಯ ಪಾಲಕರು, ಖಾಯಂ, ಹೊರಸಂಪನ್ಮೂಲ ಡಿ-ಗ್ರೂಪ್ ಸಿಬ್ಬಂದಿ ಉಪಸ್ಥಿತರಿದ್ದರು.
ಉತ್ತಮ ವ್ಯವಸ್ಥೆ ಹೊಂದಿದ ಹಾಸ್ಟೆಲ್‌ಗೆ ಸಂವಿಧಾನ ಪುಸ್ತಕ ಉಡುಗೊರೆ: ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನ್ ರಾಜ್ ಅವರು ಇತ್ತೀಚೆಗೆ ಕೊಪ್ಪಳ ಜಿಲ್ಲೆಯ ಕ್ಷೇತ್ರ ಭೇಟಿ ವೇಳೆ ಕುಕನೂರು ತಾಲ್ಲೂಕಿನ ಡಾ ಬಿ.ಆರ್.ಅಂಬೇಡ್ಕರ್ ಸರಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ಅಲ್ಲಿನ ವ್ಯವಸ್ಥೆಯ ಬಗ್ಗೆ ಹಾಗೂ ಬೆಳಗಿನ ಉಪಹಾರದಲ್ಲಿ ಸಿದ್ದಪಡಿಸಲಾಗಿದ್ದ ಅವಲಕ್ಕೆ ಒಗ್ಗರಣೆ ಸೇವಿಸಿ, ಉತ್ತಮ ಗುಣಮಟ್ಟಕ್ಕೆ ಮೇಚ್ಚುಗೆ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ವಸತಿ ನಿಲಯದ ನಿಲಯ ಪಾಲಕರಿಗೆ ಸಂವಿಧಾನ ಕಿರು ಪುಸ್ತಕವನ್ನು ಜಿ.ಪಂ ಸಿಇಓ ರಾಹುಲ್‌ ರತ್ನಂ ಪಾಂಡೆಯ ಅವರು ವಿತರಣೆ ಮಾಡಿ ಅಭಿನಂದಿಸಿದರು.

Get real time updates directly on you device, subscribe now.

Comments are closed.

error: Content is protected !!