ಅತಿವೃಷ್ಠಿ, ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿ: ಶಿವರಾಜ ಎಸ್.ತಂಗಡಗಿ
: ಮುಂದಿನ ವಾರದಿಂದ ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆ ಕುರಿತು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿರುವುದರಿಂದ ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕಳೆದ ಜೂನ್ ಮಾಹೆಯಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಿತ್ತು. ಜುಲೈ ಮಾಹೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಬರುವ ವಾರದಿಂದ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿ ಸಿದ್ದತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಮಳೆಯಿಂದಾಗಿ ಚರಂಡಿ ತುಂಬಿ ಹರಿದು ಅವ್ಯವಸ್ಥೆ ಉಂಟಾಗದAತೆ ನೋಡಿಕೊಳ್ಳಬೇಕು. ನೀರಿನ ಪೈಪ್‌ಲೈನ್‌ಗಳ ದುರಸ್ಥಿಗೆ ಗಮನ ಹರಿಸಬೇಕು ಎಂದರು.
ಪ್ರಸ್ತುತ ತುಂಗಭದ್ರಾ ಜಲಾಶಯದಿಂದ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುತ್ತಿರುವುದರಿಂದ ನದಿ ಪಾತ್ರದ ಗ್ರಾಮಗಳು ತೊಂದರೆಗೆ ಒಳಗಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಅಂತಹ ಗ್ರಾಮಗಳನ್ನು ಗುರುತಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಪ್ರವಾಹ ಪರಿಸ್ಥಿತಿ ಎದುರಾದಲ್ಲಿ ಅವಶ್ಯಕ ಸಂದರ್ಭ ಬಂದಲ್ಲಿ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸುರಕ್ಷಿತ ಸ್ಥಳಗಳನ್ನು ಗುರುತಿಸಬೇಕು. ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುವಾಗ ನದಿ ಪಾತ್ರದ ಜನರು ಎಚ್ಚರಿಕೆ ವಹಿಸುವಂತೆ ಡಂಗುರಗಳ ಮೂಲಕ ಜಾಗೃತಿ ಮೂಡಿಸಬೇಕು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಜವಾಬ್ದಾರಿ ನಿರ್ವಹಿಸಿ ಎಂದು ಸಚಿವರು ಅಧಿಕಾರಿಗಳಿಗೆ ತಿಳಿಸಿದರು.
ಜುಲೈ ಮಾಹೆಯ ಮಳೆಯ ಕೊರತೆಯಿಂದ ಒಣ ಬೇಸಾಯ ಅಥವಾ ಮಳೆಯಾಧಾರಿತ ಕೃಷಿಕರು ತೊಂದರೆಗೆ ಒಳಗಾಗಲಿದ್ದಾರೆ. ಮುಂದಿನ ವಾರವೂ ಮಳೆಯಾಗದಿದ್ದರೆ ಈಗಾಗಲೇ ಬಿತ್ತನೆ ಮಾಡಿದ ಬೆಳೆಗಳು ಹಾನಿಯಾಗುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ಪರಿಶೀಲಿಸಿ ಮಳೆಯಾಗದಿದ್ದಲ್ಲಿ ಬೆಳೆ ಹಾನಿ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಬೆಳೆ ವಿಮೆ ಕುರಿತು ರೈತರಿಂದ ದೂರುಗಳು ಬಾರದ ಹಾಗೆ ಅರ್ಹ ರೈತರಿಗೆ ಬೆಳೆವಿಮೆ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಬೇಕು ಎಂದರು.
ಫಸಲ್‌ಬಿಮಾ ಯೋಜನೆಯಡಿ ಗ್ರಾಮವಾರು ಮಾಹಿತಿ ಸಂಗ್ರಹಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಜುಲೈ ಮಾಹೆಯ ಮಳೆ ಕೊರತೆಯಿಂದ ಗಂಗಾವತಿ ಹಾಗೂ ಕಾರಟಗಿ ಭಾಗದಲ್ಲಿ 28.96 ಹೆಕ್ಟೆರ್ ಹಾಗೂ ಕೊಪ್ಪಳ ತಾಲ್ಲೂಕಿನಲ್ಲಿ 1.78 ಹೆ. ಪ್ರದೇಶದಲ್ಲಿ ಬೆಳೆಹಾನಿಯಾಗಿರುವ ಬಗ್ಗೆ ವಿವರವಾದ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.
ತುಂಗಭದ್ರಾ ಜಲಾಶಯದಲ್ಲಿ ಸದ್ಯ ಒಳಹರಿವು ಹೆಚ್ಚಿದ್ದರು ಕೂಡ, ಭವಿಷ್ಯದ ದಿನಗಳ ಬಗ್ಗೆ ಯೋಜನೆ ರೂಪಿಸಿಕೊಂಡು, ಅಗತ್ಯ ಪ್ರಮಾಣದಲ್ಲಿ ಡ್ಯಾಮನಲ್ಲಿ ನೀರನ್ನು ಸಂಗ್ರಹಿಸುವ ಕಾರ್ಯವಾಗಬೇಕು. ಹೆಚ್ಚುವರಿ ನೀರನ್ನು ನದಿಗೆ ಹರಿಸಿ ನದಿ ನೀರಿನ ಮೇಲೆ ಅವಲಂಬಿತರಾದ ರೈತರಿಗೆ ಸಮಸ್ಯೆಯಾಗದಂತೆ ನೀರು ಪೂರೈಕೆ ಮಾಡಿ ಎಂದು ಸಂಬAಧಿಸಿದ ಇಲಾಖಾ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಮಾತನಾಡಿ, ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿ ಪ್ರವಾಹ ಪರಿಸ್ಥಿತಿ ಉಂಟಾದಲ್ಲಿ ಕೈಗೊಳ್ಳಬೇಕಾದ ಎಲ್ಲ ಕ್ರಮಗಳ ಬಗ್ಗೆ ಸಿದ್ದತೆ ಮಾಡಿಕೊಳ್ಳಲಾಗಿದೆ. ತೊಂದರೆಗೆ ಒಳಗಾಗಬಹುದಾದ ನದಿ ಪಾತ್ರದ 25 ಗ್ರಾಮ ಪಂಚಾಯತಿಗಳನ್ನು ಗುರುತಿಸಲಾಗಿದೆ. ಪ್ರವಾಹ ತಲೆದೋರಿದಲ್ಲಿ ಪರಿಹಾರ ಕ್ರಮವಾಗಿ ಗಂಜಿ ಕೇಂದ್ರಗಳನ್ನು ಗುರುತಿಸಲಾಗಿದೆ. ಪ್ರತಿ ಗ್ರಾಮ ಪಂಚಾಯತಿಗೂ ಟಾಸ್ಕ್ಫೋರ್ಸ್ ರಚಿಸಲಾಗಿದ್ದು, ನೋಡಲ್ ಅಧಿಕಾರಿಯನ್ನು ಸಹ ನಿಯೋಜನೆ ಮಾಡಲಾಗಿದೆ. ಜಿಲ್ಲಾಡಳಿತದಿಂದ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರಿಗೆ ಮಾಹಿತಿ ನೀಡಿದರು.
ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್. ಅವರು ಮಾತನಾಡಿ, ಜುಲೈ ಮಾಹೆಯಲ್ಲಿ ಶೇ.24 ರಷ್ಟು ಮಳೆ ಕೊರತೆಯಾಗಿದೆ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಮಳೆ ಕೊರತೆ ಹಾಗೂ ಹೆಚ್ಚಿನ ಮಳೆಯಿಂದ ಆಗುವ ಬೆಳೆಹಾನಿ ಕುರಿತು ಸಮೀಕ್ಷೆ ಮೂಲಕ ಮಾಹಿತಿ ಸಂಗ್ರಹಿಸಲಾಗುವುದು. 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಒಟ್ಟು 9,895.33 ಕ್ವಿಂ. ಬಿತ್ತನೆ ಬೀಜ ದಾಸ್ತಾನು ಸ್ವೀಕೃತವಾಗಿದ್ದು, 8,098.63 ಕ್ವಿಂ. ಬಿತ್ತನೆ ಬೀಜ ಮಾರಾಟ ಮಾಡಲಾಗಿದೆ. 1,796.70 ಕ್ವಿಂ. ಉಳಿಕೆ ದಾಸ್ತಾನು ಸಂಗ್ರಹದಲ್ಲಿದೆ. ಬಿತ್ತನೆ ಬೀಜಕ್ಕೆ ಯಾವುದೇ ಕೊರತೆ ಇರುವುದಿಲ್ಲ. ಅದರಂತೆ 2024ನೇ ಸಾಲಿನಲ್ಲಿ ಒಟ್ಟು 1,07,278 ಟನ್ ರಸಗೊಬ್ಬರ ದಾಸ್ತಾನು ಸ್ವೀಕೃತಿಯಾಗಿದ್ದು, 52,008 ಟನ್ ರಸಗೊಬ್ಬರ ಮಾರಾಟ ಮಾಡಲಾಗಿದೆ. ಆಗಸ್ಟ್ 02 ರಂತೆ 55,271 ಟನ್ ರಸಗೊಬ್ಬರ ಉಳಿಕೆ ದಾಸ್ತಾನು ಸಂಗ್ರಹದಲ್ಲಿದೆ. ರಸಗೊಬ್ಬರದ ಕೊರತೆ ಇರುವುದಿಲ್ಲ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನಮಗೌಡ ಪಾಟೀಲ್, ಸಂಸದರಾದ ಕೆ.ರಾಜಶೇಖರ ಹಿಟ್ನಾಳ್, ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಎಲ್ಲ ತಾಲ್ಲೂಕುಗಳ ತಹಶೀಲ್ದಾರರು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.
ಪೋಸ್ಟರ್ ಬಿಡುಗಡೆ:
ಮೆಕ್ಕೆ ಜೋಳದಲ್ಲಿ ಕಂಡುಬರುವ ಹಾಗೂ ಕಂಡುಬರಬಹುದಾದ ಜೈವಿಕ ಹುಳಗಳ ನಿರ್ವಹಣೆ ಕುರಿತು ಕೃಷಿ ಇಲಾಖೆ ಹೊರತಮದಿರುವ ಪೋಸ್ಟರ್‌ಗಳನ್ನು ಸಚಿವರಾದ ಶಿವರಾಜ ತಂಗಡಗಿ, ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನಮಗೌಡ ಪಾಟೀಲ್ ಅವರು ಬಿಡುಗಡೆಗೊಳಿಸಿದರು.
ಈ ಸಂದರ್ಭ ಸಂಸದರಾದ ಕೆ.ರಾಜಶೇಖರ ಹಿಟ್ನಾಳ್, ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್, ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಎಲ್ಲ ತಾಲ್ಲೂಕುಗಳ ತಹಶೀಲ್ದಾರರು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.
Comments are closed.