ಜುಲೈ 17ರಿಂದ ಸಕ್ರಿಯ ಕ್ಷಯ ರೋಗ ಪತ್ತೆ ಚಿಕಿತ್ಸಾ ಆಂದೋಲನ

Get real time updates directly on you device, subscribe now.

ಕೊಪ್ಪಳ  ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ಸಕ್ರಿಯ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಅಂಗವಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜುಲೈ 10ರಂದು ಪೂರ್ವಭಾವಿ ಸಭೆ ನಡೆಯಿತು.
ಇದೆ ವೇಳೆ ಸಿಇಓ ಅವರು ಮಾತನಾಡಿ, ಕ್ಷಯರೋಗಿಗಳನ್ನು ಪತ್ತೆ ಹಚ್ಚಲು ಮತ್ತು ಚಿಕಿತ್ಸೆ ನೀಡಲು ಕ್ಷೇತ್ರ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಮನೆಗಳ ಭೇಟಿಗಳ ಮೂಲಕ ಹೆಚ್ಚಿನ ಅಪಾಯದ ಪ್ರದೇಶಗಳಲ್ಲಿ ವ್ಯವಸ್ಥಿತ ಸಕ್ರಿಯ ಟಿಬಿ ಪ್ರಕರಣಗಳನ್ನು ಪತ್ತೆ  ಮಾಡಬೇಕು. ಅಂತಹ ಪ್ರಕರಣಗಳು ಕಂಡು ಬಂದಲ್ಲಿ  ತ್ವರಿತವಾಗಿ ಚಿಕಿತ್ಸೆ ಪ್ರಾರಂಭಿಸಬೇಕು. ಕ್ಷಯ ರೋಗ ತಡೆ ಬಗ್ಗೆ ಸಾಮೂಹಿಕ ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಎಲ್ಲರೂ ಒಗ್ಗೂಡಿ, ಜಾಗೃತಿ ಮೂಡಿಸಿ  ಕೊಪ್ಪಳವನ್ನು ಕ್ಷಯ ಮುಕ್ತ ಜಿಲ್ಲೆಯಾಗಿಸೋಣ ಎಂದರು.
ಕ್ಷಯರೋಗ ಮೂಲೋತ್ಪಾಟನೆಗೆ ವಿವಿಧ
ಇಲಾಖೆಗಳ ಸಕ್ರಿಯ ಪಾಲ್ಗೊಳ್ಳುವಿಕೆ ಅಗತ್ಯವಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವರು ಗ್ರಾಮವಾರು ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಕ್ಷಯ ಪರೀಕ್ಷೆ ಮಾಡಿಸಲು ಕ್ರಮ ವಹಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಕ್ಷಯ ಸೋಂಕಿತರಿರುವ ಗ್ರಾಮಗಳಲ್ಲಿ ಕ್ಷಯದ ಪರೀಕ್ಷೆ ನಡೆಸಲು ಆಯಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಮಿತಿ ರಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಜಿಲ್ಲೆಯ ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ, ಚರ್ಚಾ, ಕ್ವಿಜ್ ಸ್ಪರ್ಧೆಗಳು ಹಾಗೂ ಜಾಥಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ವಿವಿಧ ಇಲಾಖೆಗಳ ಅಧೀನದಲ್ಲಿ ಬರುವ ವಸತಿ ನಿಲಯಗಳಲ್ಲಿಯು ಸಹ ಈ ರೋಗದ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಜಿಲ್ಲೆಯ ಎಲ್ಲಾ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಸವಿಲೇವಾರಿ ವಾಹನಗಳ ಮೂಲಕವೂ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಬೇಕು. ಸಕ್ರಿಯ ಕ್ಷಯ ರೋಗ ಪತ್ತೆ, ಚಿಕಿತ್ಸಾ ಆದೋಲನಕ್ಕೆ ಎಲ್ಲಾ ಇಲಾಖೆಗಳು ಅಗತ್ಯ ಸಹಕಾರ ನೀಡಬೇಕು ಎಂದು ಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಮಾತನಾಡಿ, ಕಾರ್ಮಿಕ ಸಂಘ- ಸಂಸ್ಥೆಗಳಲ್ಲಿ, ವಿವಿಧ ಬಗೆಯ ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ  ಕಾರ್ಮಿಕರಿಗೆ ತಪ್ಪದೇ ಕ್ಷಯ ಪರೀಕ್ಷೆ ಮಾಡಿಸಬೇಕು. ಇದರಿಂದ ರೋಗಪತ್ತೆಗೆ ಅನುಕೂಲವಾಗಲಿದೆ. ಜೊತೆಗೆ ಕ್ಷಯರೋಗಿಗಳಿಗೆ ಮುಖ್ಯವಾಗಿ ಅಗತ್ಯವಿರುವ ಪೂರ್ಣ ಪ್ರಮಾಣದ ಚಿಕಿತ್ಸೆ ಕುರಿತು ವಿಶೇಷವಾಗಿ ಮಾಹಿತಿ ನೀಡಬೇಕು ಎಂದರು.
ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳಾದ ಡಾ.ಶಶೀಧರ್ ಎ ಅವರು ಮಾತನಾಡಿ, ಜಿಲ್ಲೆಯಲ್ಲಿ ಜುಲೈ 17ರಿಂದ ಆಗಸ್ಟ್ 02ರವರೆಗೆ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಹಮ್ಮಿಕೊಳ್ಳಲಾಗುತ್ತಿದ್ದು, ನಿರಂತರ ಚಿಕಿತ್ಸೆಯಿಂದ ಕ್ಷಯರೋಗ ಗುಣಪಡಿಸಬಹುದಾಗಿದೆ. ರೋಗ ನಿರ್ಣಯಿಸಿದ ಎಲ್ಲಾ ಪ್ರಕರಣಗಳಿಗೆ ಉಚಿತ ಚಿಕಿತ್ಸೆ ಎಂಬ ಗುರಿಯೊಂದಿಗೆ ಹಾಗೂ ಹೌದು ನಾವು  ಕ್ಷಯರೋಗ ಕೊನೆಗೊಳಿಸಬಹುದು ಎಂಬ ಘೋಷವಾಕ್ಯದೊಂದಿಗೆ ಅರಿವು ಮೂಡಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ ಟಿ.ಲಿಂಗರಾಜು, ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ರವಿಂದ್ರನಾಥ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ನಂದಕುಮಾರ, ಆರ್.ಸಿ.ಹೆಚ್ ಡಾ.ಪ್ರಕಾಶ, ತಾಲೂಕು ಆರೋಗ್ಯಾಧಿಕಾರಿಗಳಾದ ಡಾ.ರಾಮಾಂಜನೇಯ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿಗಳಾದ ಡಾ.ವೆಂಕಟೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
*ಪೋಸ್ಟರ್ ಬಿಡುಗಡೆ:* ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಕೇಂದ್ರ ಇವರ ಸಹಯೋಗದಲ್ಲಿ ಜುಲೈ 17ರಿಂದ ಆಗಸ್ಟ್ 02ರವರೆಗೆ ಹಮ್ಮಿಕೊಂಡ ಸಕ್ರಿಯ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನದ ಜಾಗೃತಿ ಮೂಡಿಸುವ ಪೋಸ್ಟರ್‌ಗಳನ್ನು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು

Get real time updates directly on you device, subscribe now.

Comments are closed.

error: Content is protected !!
%d bloggers like this: