ಸೆಪ್ಟೆಂಬರ್ 14ರಂದು  ರಾಷ್ಟ್ರೀಯ ಲೋಕ್ ಅದಾಲತ್

Get real time updates directly on you device, subscribe now.

ಪ್ರಕರಣಗಳ ಇತ್ಯರ್ಥಕ್ಕೆ ಇಲಾಖೆಗಳು ಸಹಕರಿಸಿ: ನ್ಯಾ.ಮಹಾಂತೇಶ್ ಎಸ್ ದರಗದ
“ರಾಷ್ಟ್ರೀಯ ಲೋಕ್ ಅದಾಲತ್” ಕಾರ್ಯಕ್ರಮದ ಮೂಲಕ ರಾಜಿ ಆಗಬಲ್ಲ ಪ್ರಕರಣಗಳ ಇತ್ಯರ್ಥಕ್ಕೆ ಇಲಾಖೆಗಳು ಸಹಕರಿಸಬೇಕು ಎಂದು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ್ ಎಸ್ ದರಗದ ಅವರು ಹೇಳಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ್ ಅದಾಲತ್ ಆಚರಿಸುವ ಕುರಿತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಚೇರಿಯಲ್ಲಿ ಆಗಸ್ಟ್ 31ರಂದು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯಾದ್ಯಂತ ಸೆಪ್ಟೆಂಬರ್ 14ರಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದ್ದು, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದ ಮೇರೆಗೆ ಕೊಪ್ಪಳ ಜಿಲ್ಲೆಯಲ್ಲಿಯೂ ಸಹ ರಾಷ್ಟ್ರೀಯ ಲೋಕ್ ಅದಾಲತ್ ಜರುಗಲಿದೆ.  ಜಿಲ್ಲೆಯ ಕೊಪ್ಪಳ, ಗಂಗಾವತಿ, ಕುಷ್ಟಗಿ ಮತ್ತು ಯಲಬುರ್ಗಾ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಪ್ರಕರಣಗಳು ಹಾಗೂ ಇನ್ನೂ ನ್ಯಾಯಾಲಯಕ್ಕೆ ದಾಖಲಿಸದೇ ಇರುವ ಪ್ರಕರಣಗಳನ್ನು ವ್ಯಾಜ್ಯಪೂರ್ವ ಪ್ರಕರಣಗಳು ಎಂದು ಪರಿಗಣಿಸಿ, ವಿವಿಧ ಪ್ರಕರಣಗಳಾದ ಮೋಟಾರು ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಅಸಲು ದಾವೆಗಳು, ಬ್ಯಾಂಕುಗಳಿಗೆ ಸಂಬಂಧಿಸಿದ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು, ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು, ಕಾನೂನಿನನ್ವಯ ರಾಜೀ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು ಹಾಗೂ ರಾಜೀ ಆಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಇತ್ಯರ್ಥಪಡಿಸಬಹುದು ಎಂದರು.
ಬ್ಯಾಂಕುಗಳು, ಕಂದಾಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಅರಣ್ಯ ಇಲಾಖೆ, ಅಬಕಾರಿ ಇಲಾಖೆ, ಕೆ.ಕೆ.ಆರ್.ಟಿ.ಸಿ., ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ತೆರಿಗೆ ಹಾಗೂ ಇನ್ನಿತರ ರಾಜೀ ಆಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಇತ್ಯರ್ಥಪಡಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಹಕಾರ ಅತ್ಯವಶ್ಯಕವಾಗಿದೆ.  ರಾಷ್ಟ್ರೀಯ ಲೋಕ್ ಅದಾಲತ್ ನಿಂದಾಗಿ ಪ್ರಕರಣಗಳ ಇತ್ಯರ್ಥವಾಗುವುದಲ್ಲದೇ ಸರ್ಕಾರದ ಖಜಾನೆಗೆ ಹಣ ಬರುತ್ತದೆ.  ಈ ಹಿನ್ನೆಲೆಯಲ್ಲಿ ಸೆ.14ಕ್ಕೆ ಜಿಲ್ಲೆಯಾದ್ಯಂತ ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ಹೆಚ್ಚಿನ ಪ್ರಕರಣಗಳ ಇತ್ಯರ್ಥಕ್ಕೆ ಕೈ ಜೋಡಿಸಬೇಕು.  ರಾಷ್ಟ್ರೀಯ ಲೋಕ್ ಅದಾಲತ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೆ.ಕೆ.ಆರ್.ಟಿ.ಸಿ. ಯವರು ತಮ್ಮ ಬಸ್ ನಿಲ್ದಾಣಗಳಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ಕಸ ವಿಲೇವಾರಿ ವಾಹನಗಳ ಮೂಲಕ ಇನ್ನೂ ಹೆಚ್ಚು ಪ್ರಚಾರ ಮಾಡಿ, ರಾಜೀ ಆಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಬಾಕಿ ಉಳಿಸದೆ ಇತ್ಯರ್ಥಪಡಿಸಲು ಸಹಕರಿಸಬೇಕು ಎಂದು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸಲಹೆ ನೀಡಿದರು.
ಇದರ ಜೊತೆಗೆ ವಿವಿಧ ಇಲಾಖೆಗಳ ಮೂಲಕ ಸಾರ್ವಜನಿಕರಿಗೆ ಇರುವ ಸೌಲಭ್ಯಗಳು, ಸೇವೆಗಳು ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ತಮ್ಮ ತಮ್ಮ ಇಲಾಖೆಗಳ ಯೋಜನೆ, ಕಾರ್ಯಕ್ರಗಳ ಕುರಿತು ಹೆಚ್ಚಿನ ಅರಿವು ಮಾಡಿಸಿ, ಅರ್ಹರಿಗೆ ಸೌಲಭ್ಯ ಸಿಗುವಂತೆ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಿಬ್ಬಂದಿ ಹಾಗೂ ಮತ್ತಿತರರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: