ನಿಯಂತ್ರಣ ಸಾಧಿಸದ ಪ್ರದೇಶಗಳಗೆ ಹೆಚ್ಚಿನ ನಿಗಾವಹಿಸಿ : ನಲಿನ್ ಅತುಲ್
ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ
ಎಸ್ಸಿ-ಎಸ್ಟಿ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ನಿಯಂತ್ರಣ ಸಾಧಿಸದ ಪ್ರದೇಶಗಳ ಕಡೆ ಹೆಚ್ಚಿನ ನಿಗಾವಹಿಸಿ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೆಪ್ಟೆಂಬರ್ 12 ರಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಕೊಪ್ಪಳ ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುವ ಪ್ರದೇಶಗಳನ್ನು ಗುರುತಿಸಿ, ಆ ಪ್ರದೇಶಗಳ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ನಿಗಾವಹಿಸಬೇಕು.ಹೆಚ್ಚಿನ ಪ್ರಮಾಣದಲ್ಲಿ ದೌರ್ಜನ್ಯ ಪ್ರಕರಣಗಳು ಕಂಡುಬರುವ ಪ್ರದೇಶಗಳಿಗೆ ಪೊಲೀಸ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಜನರಲ್ಲಿ ಕಾನೂನಿನ ಅರಿವು ಮೂಡಿಸುವ ಮೂಲಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹತೋಟಿಗೆ ತರುವ ಪ್ರಯತ್ನ ಮಾಡಬೇಕು. ದೌರ್ಜನ್ಯ ನಿಯಂತ್ರಣದ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಏರ್ಪಡಿಸಿಸಬೇಕು. ಈಗಾಗಲೇ ದೌರ್ಜನ್ಯ ಪ್ರಕರಣಗಳಲ್ಲಿ ನಿಯಂತ್ರಣ ಸಾಧಿಸಿರುವ ಪ್ರದೇಶಗಳ ಕಡೆ ಹೆಚ್ಚಿನ ಗಮನ ನೀಡದೇ, ನಿಯಂತ್ರಣ ಸಾಧಿಸದ ಪ್ರದೇಶಗಳ ಕಡೆ ತೀವ್ರ ನಿಗಾವಹಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಯಾವುದೇ ಭಾಗದಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದವರ ಮೇಲೆ ದೌರ್ಜನ್ಯ ಆದಲ್ಲಿ ಕೂಡಲೇ ಈ ಸಂಬಂಧವಾಗಿ ದೂರು ದಾಖಲಿಸಬೇಕು. ಅಗತ್ಯ ವೈದ್ಯಕೀಯ ಸೇವೆ ಒದಗಿಸಬೇಕು. ರಕ್ಷಣೆ ನೀಡುವುದರ ಜೊತೆಗೆ ಸಂತ್ರಸ್ತರಿಗೆ ನಿಯಮಾನುಸಾರ ನಿಗದಿತ ಅವಧಿಯಲ್ಲಿ ಪರಿಹಾರ ವಿತರಿಸಬೇಕು. ಸಂತ್ರಸ್ತರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು. ಅನಗತ್ಯ ತೊಂದರೆ, ವಿಳಂಬ, ನಿರ್ಲಕ್ಷ್ಯ ತೋರುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರಾಜು ತಳವಾರ ಅವರು ಮಾತನಾಡಿ, 2024ನೇ ಕ್ಯಾಲೆಂಡರ್ ವರ್ಷದಲ್ಲಿ ಒಟ್ಟು ಎಫ್.ಐ.ಆರ್ ಹಂತದ 51 ಪ್ರಕರಣಗಳಿಗೆ ರೂ. 47.375 ಲಕ್ಷಗಳ ಪರಿಹಾರಧನವನ್ನು ಮಂಜೂರಿಸಲಾಗಿದೆ. ಚಾರ್ಜ್ ಶೀಟ್ ಹಂತದಲ್ಲಿನ 33 ಪ್ರಕರಣಗಳಿಗೆ ರೂ.73.00 ಲಕ್ಷಗಳ ಪರಿಹಾರಧನವನ್ನು ಮಂಜೂರಿಸಲಾಗಿದೆ. ಪ್ರಸ್ತುತ ವರ್ಷದಲ್ಲಿ ಒಟ್ಟು 2 ಪ್ರಕರಣದಲ್ಲಿ ಮೃತರ ಸಂತ್ರಸ್ತರಿಗೆ ರೂ.4.125 ಲಕ್ಷಗಳ ಪರಿಹಾರಧನವನ್ನು ನೀಡಲಾಗಿದೆ. ದಾಖಲಾದ ದೌರ್ಜನ್ಯ ಪ್ರಕರಣಗಳಲ್ಲಿ ವಿಳಂಬವಿಲ್ಲದೆ ಪರಿಹಾರಧನ ಮಂಜೂರಾತಿಗೆ ಕ್ರಮ ವಹಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್ ಅರಸಿದ್ಧಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾ.ಪಂ ಕಾರ್ಯನಿರ್ವಹಣಾ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು, ಎಸ್.ಸಿ.-ಎಸ್.ಟಿ, ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಅಧಿಕಾರೇತರ ಸದಸ್ಯರು, ಎನ್.ಜಿ.ಓ ಮುಖ್ಯಸ್ಥರು ಹಾಗೂ ಇತರರು ಉಪಸ್ಥಿತರಿದ್ದರು.
Comments are closed.