ದೈಹಿಕವಾಗಿ ಸದೃಢರಾಗಲು ಕ್ರೀಡೆ ಅತೀ ಮುಖ್ಯ: ಕೆ.ರಾಜಶೇಖರ ಹಿಟ್ನಾಳ
ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಪ್ರಸಕ್ತ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮವು ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 24ರಂದು ನಡೆಯಿತು.
ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ ಅವರು ಕ್ರೀಡಾ ಧ್ವಜಾರೋಹಣ ಹಾಗೂ ಕ್ರೀಡಾ ಜ್ಯೋತಿ ಬೆಳಗಿಸಿ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಯುವಜನತೆ ಕ್ರೀಡೆಯಲ್ಲಿ ಭಾಗಿಯಾಗಲು ಹೆಚ್ಚು ಆಸಕ್ತಿ ತೋರಬೇಕು. ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ವ್ಯಕ್ತಿಯ ಗಮನ, ಶಿಸ್ತು, ಏಕಾಗ್ರತೆಯನ್ನು ಹೆಚ್ಚಿಸುತ್ತದೆ ಹಾಗೂ ದೇಹವನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಿ ಇಡಲು ಕ್ರೀಡೆಯು ಅತೀ ಮುಖ್ಯವಾಗಿದೆ ಎಂದು ಹೇಳಿದರು. ಕ್ರೀಡೆಯು ಜೀವನದಲ್ಲಿ ಆತ್ಮಸ್ಥೈರ್ಯ ಮತ್ತು ಧೈರ್ಯವನ್ನು ಹೆಚ್ಚಿಸುತ್ತದೆ. ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವುದು ಅತ್ಯವಶ್ಯಕವಾಗಿದೆ ಎಂದು ಕ್ರೀಡಾಪಟುಗಳಿಗೆ ತಿಳಿಸಿದರು.
ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿ ಹೆಚ್ಚಿನ ಸಂಖ್ಯೆಯಲ್ಲಿ ವಿಜೇತರಾಗಿ, ಮುಂದೆ ವಿಭಾಗ ಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ, ರಾಜ್ಯ ಮಟ್ಟದಲ್ಲಿ ಕೊಪ್ಪಳ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಮಾತನಾಡಿ, ಕ್ರೀಡೆಯಿಂದ ದೈಹಿಕ ಲಾಭದ ಜೊತೆಗೆ ಮಾನಸಿಕ ಕಾರ್ಯವು ಗಟ್ಟಿಗೊಳ್ಳುತ್ತದೆ. ಮಕ್ಕಳು ಪಾಠದ ಜೊತೆಗೆ ಪ್ರೀತಿಯಿಂದ ಸಂತೋಷದಿಂದ ಕ್ರೀಡೆಯಲ್ಲಿ ಭಾಗವಹಿಸಿ ಸಾಧನೆ ಮಾಡಬೇಕು. ಕ್ರೀಡೆಯು ಈ ಎರಡು ದಿನಗಳಿಗೆ ಮಾತ್ರ ಸೀಮಿತವಾಗಬಾರದು, ಪ್ರತಿ ದಿನ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು. ಕೊಪ್ಪಳ ಜಿಲ್ಲೆಯ ಕ್ರೀಡಾಪಟುಗಳು ಈ ಬಾರಿ ಉತ್ತಮ ಪ್ರದರ್ಶನ ನೀಡಿ, ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಲಿದ್ದಾರೆ ಎಂಬ ವಿಶ್ವಾಸ ನಮಗೆ ಎಂದು ಹೇಳಿದರು.
ಕ್ರೀಡಾಕೂಟದಲ್ಲಿ ಭಾಗವಹಿಸುವಂತಹ ಕ್ರೀಡಾಪಟುಗಳಿಗೆ ಆಟದ ಸಮಯದಲ್ಲಿ ಆರೋಗ್ಯದಲ್ಲಿ ತೊಂದರೆ ಉಂಟಾದರೆ ನಿರ್ಲಕ್ಷಿಸದೆ ತಕ್ಷಣವೇ ವೈದ್ಯರನ್ನು ಭೇಟಿ ಮಾಡಿ, ಚಿಕಿತ್ಸೆ ತೆಗೆದುಕೊಳ್ಳಿ, ನಿರ್ಣಾಯಕರ ತೀರ್ಮಾನವೇ ಅಂತಿಮ ತಿರ್ಮಾನವಾಗಿರುತ್ತದೆ. ಯಾವುದೇ ಗೊಂದಲಗಳು ಇದ್ದರೆ ಅದನ್ನು ಸಮಿತಿಯವರಿಗೆ ತಿಳಿಸಿ ಬಗೆಹರಿಸಿಕೊಳ್ಳಿ ಜೊತೆಗೆ ಕ್ರೀಡೆಯಲ್ಲಿ ಶಿಸ್ತನ್ನು ಕಾಪಾಡಿಕೊಳ್ಳಿ ಎಂದು ಕ್ರೀಡಾ ಪಟುಗಳಿಗೆ ಸಲಹೆ ನೀಡಿದರು.
ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಅಧಿಕಾರಿಗಳಾದ ವಿಠ್ಠಲ ಜಾಬಗೌಡರ ಅವರು ಮಾತನಾಡಿ, ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಎರಡು ದಿನಗಳ ಕಾಲ ಆಯೋಜನೆ ಮಾಡಲಾಗಿದ್ದು, ಸೋಲು ಗೆಲುವು ಅನ್ನೊದು ಕ್ರೀಡೆಯ ಒಂದು ಅವಿಭಾಜ್ಯ ಅಂಗವಾಗಿದೆ. ಈ ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಭಾಗವಹಿಸಬೇಕು. ನಿರ್ಣಯದ ಕುರಿತು ಏನೇ ಸಮಸ್ಯೆ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿ ಪರಿಹಾರ ಕಂಡುಕೊಳ್ಳವುದರ ಮೂಲಕ ಕ್ರೀಡಾಪಟುಗಳು ವಿಜೇತರಾಗಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ ಎಂದು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳಾದ ಎ.ಬಸವರಾಜ, ತಾಲೂಕಿನ ಕ್ರೀಡಾಧಿಕಾರಿಗಳಾದ ಶರಣಬಸಪ್ಪ ಬಂಡಿಹಾಳ, ಮಂಜುನಾಥ ಗೊಂಡಬಾಳ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕ್ರೀಡೆಯಲ್ಲಿ ಭಾಗಿಯಾದ ಸಿಇಓ: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದ ಜಿಪಂ ಸಿಇಓ ರಾಹುಲ್ ರತ್ನಂ ಪಾಂಡೆಯ ಅವರು ಗುಂಡು ಎಸೆತ ಸ್ಪರ್ಧಾಳುಗಳೊಂದಿಗೆ ಆಪ್ತವಾಗಿ ಮಾತನಾಡಿ ಗುಂಡು ಎಸೆಯುವ ಮೂಲಕ ಅವರಿಗೆ ಸ್ಫೂರ್ತಿ ನೀಡಿದರು.
Comments are closed.