ಜನರ ಶ್ರೇಯೋಭಿವೃದ್ಧಿಗಾಗಿ ಗ್ಯಾರಂಟಿ ಯೋಜನೆಗಳು ಜಾರಿ: ಸಂಸದರಾದ ಕೆ.ರಾಜಶೇಖರ ಹಿಟ್ನಾಳ
ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ
-: ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ ಅವರು ಸೆ.27ರಂದು ಕೊಪ್ಪಳ ಗ್ರಾಮೀಣ ಪ್ರದೇಶದಲ್ಲಿ ಪ್ರವಾಸ ಕೈಗೊಂಡು
ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾದರು.
ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಸೆ. 27ರಂದು
ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸಂಸದರು,
ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ, ಶಕ್ತಿ ಹಾಗೂ ಅನ್ನಭಾಗ್ಯ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿ, ಆಯಾ ಯೋಜನೆಗಳ
ಫಲಾನುಭವಿಗಳಿಗೆ ಸರ್ಕಾರದ ಸಹಾಯಧನ ಮತ್ತು ಇನ್ನೀತರ ಸೌಕರ್ಯಗಳು ಸಮರ್ಪಕವಾಗಿ ತಲುಪುತ್ತಿರುವುದರ ಬಗ್ಗೆ ಖಚಿತಪಡಿಸಿಕೊಂಡರು.
ಇದಕ್ಕು ಮೊದಲು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸದರು, ಸರ್ಕಾರವು ಜನರ ಶ್ರೇಯೋಭಿವೃದ್ಧಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಸರ್ಕಾರದ ಈ ಸದುದ್ದೇಶ ಈಡೇರಿದೆಯೇ ಇಲ್ಲವೇ, ಜನರ ನಿರೀಕ್ಷೆ ಏನು ಎಂಬುದರ ಬಗ್ಗೆ ಫಲಾನುಭವಿಗಳಿಂದಲೇ ಅಭಿಪ್ರಾಯ ಪಡೆಯಲು ಹಾಗೂ ಗ್ಯಾರಂಟಿ ಯೋಜನೆಗಳಿಂದ ವಂಚಿತರಾದ ಫಲಾನುಭವಿಗಳಿಗೆ ಯೋಜನೆಗಳ ಮಾಹಿತಿ ತಲುಪಿಸುವುದಕ್ಕಾಗಿ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಿಂದ ಜನಜೀವನ ಆರ್ಥಿಕವಾಗಿ ಅಭಿವೃದ್ಧಿಯಾಗಿದೆ. ಆಯಾ ಯೋಜನೆಗಳಿಗೆ ಸಂಬಂಧಿಸಿದ ಇಲಾಖೆಗಳ ಅನುಷ್ಠಾನ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಹೆಚ್ಚಿನ ಮುತುವರ್ಜಿ ವಹಿಸಬೇಕು. ಅರ್ಹ ಫಲಾನುಭವಿಗಳು ಯೋಜನೆಗಳಿಂದ ವಂಚಿತರಾಗಿದ್ದರೆ ಅಂತಹ ಫಲಾನುಭವಿಗಳು ತಾಲ್ಲೂಕಿನ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಿಗೆ ಹಾಗೂ ಸದಸ್ಯರನ್ನು ಕಂಡು ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಅರ್ಹ ಫಲಾನುಭವಿಗಳು ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಬಾರದು ಎಂದು ತಿಳಿಸಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಮಾತನಾಡಿ, ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯಾಗಿರುವ ಸಾಮಾಜಿಕ ಕಾರ್ಯಕ್ರಮವಾಗಿವೆ. ಅರ್ಹರೆಲ್ಲರೂ ಗ್ಯಾರಂಟಿ ಯೋಜನೆಗಳ ವ್ಯಾಪ್ತಿಗೆ ಒಳಪಡಬೇಕು ಎಂಬುದು ಸರ್ಕಾರದ ಉದ್ದೇಶವಾಗಿದ್ದು, ಯಾವುದೇ ಅರ್ಹ ಫಲಾನುಭವಿಗಳು ಈ ಯೋಜನೆಯಿಂದ ಹೊರಗುಳಿಯಬಾರದು. ಈ ಹಿನ್ನೆಲೆಯಲ್ಲಿ ಪ್ರಮಾಣಿಕವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವಂತಹ ಕೆಲಸವನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಮಾಡಬೇಕು ಎಂದು ತಿಳಿಸಿದರು.
ಶಕ್ತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿಧಿ ಸೇರಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಉಂಟಾಗುತ್ತಿರುವ ಸಣ್ಣ-ಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ ಎಲ್ಲಾ ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೊಪ್ಪಳ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಬಾಲಚಂದ್ರ ಎನ್, ಸದಸ್ಯರಾದ ಅನ್ವರ್ ಹುಸೇನ್ ಎಂ ಗಡಾದ್, ಜ್ಯೋತಿ ಎಂ ಗೊಂಡಬಾಳ, ಮಾನ್ವಿ ಭಾಷ, ಅನ್ನದಾನ ಸ್ವಾಮಿ ಸಾಲಿಮಠ, ಅಳವಂಡಿ ಗ್ರಾ.ಪಂ ಅಧ್ಯಕ್ಷರಾದ ಶಂಕ್ರಮ್ಮ ಜೋಗಿನ, ಉಪಾಧ್ಯಕ್ಷರಾದ ಶಾರದಮ್ಮ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳಾದ ಕೊಟ್ರಪ್ಪ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
****
Comments are closed.