ಕೊಪ್ಪಳ ಪ್ರತಿ ವರ್ಷದಂತೆ ಈ ಬಾರಿಯೂ ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿ ಹಸಿರು ಪಟಾಕಿ ಬಳಕೆಯೊಂದಿಗೆ ಆಚರಿಸಿ ಮಾಲಿನ್ಯ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಜಿಲ್ಲಾ ಪರಿಸರ ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲಾ ವ್ಯಾಪ್ತಿಯಲ್ಲಿ ಪಟಾಕಿಗಳ ಮಾರಾಟ ಮತ್ತು ನಿಯಂತ್ರಿಸುವ ಕುರಿತು ಈಗಾಗಲೇ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶವಿದ್ದು, ಹಸಿರು ಪಟಾಕಿ ಅವುಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಇದ್ದು ಕ್ಯೂಆರ್ ಕೋಡ್ ಇರುವ ಪಟಾಕಿಗಳನ್ನೇ ಉಪಯೋಗಿಸಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ಹಸಿರು ಪಟಾಕಿಗಳ ಹೊರತು ಪಡಿಸಿ ಉಳಿದ ಪಟಾಕಿಗಳನ್ನು ಬಳಕೆ ಮಾಡಬಾರದು. ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಾಟಾಕಿ ಸಿಡಿಸಲು ಅವಕಾಶವಿದ್ದು, ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಇವುಗಳನ್ನು ಬಳಸುವಾಗ ಪ್ರಾಣಿ ಪಕ್ಷಿಗಳು ಮಕ್ಕಳು ಮತ್ತು ವೃದ್ದರಿಗೆ ತೊಂದರೆಯಾಗದAತೆ ಬಳಸಬೇಕು. ಆಸ್ಪತ್ರೆ, ಶಿಕ್ಷಣ ಸಂಸ್ಥೆ ಸುತ್ತಮುತ್ತ ಹಾಗೂ ನಿಷೇಧಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ಸಿಡಿಮದ್ದುಗಳನ್ನು ಸ್ಪೋಟಿಸುವಂತಿಲ್ಲ.
ತಾತ್ಕಾಲಿಕವಾಗಿ ಪಟಾಕಿ ಮಳಿಗೆಗಳನ್ನು ತೆರೆಯುವ ಮಾಲೀಕರು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಅನುಮತಿ ಪತ್ರದಲ್ಲಿ ನೀಡಿದ ಷರತ್ತುಗಳನ್ನು ತಪ್ಪದೇ ಪಾಲಿಸಬೇಕು. ಸಾರ್ವಜನಿಕರಿಗೆ ಮತ್ತು ಮಕ್ಕಳಲ್ಲಿ ಅರಿವು ಮೂಡಿಸಲು ಪರಿಣಾಮಕಾರಿಯಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.
ಸಾಂಪ್ರದಾಯಿಕ ಪಟಾಕಿಗಳಿಗಿಂತ ಹಸಿರು ಪಟಾಕಿಗಳು ಕಡಿಮೆ ಗಾತ್ರದಲ್ಲಿದ್ದು, ಇವುಗಳ ತಯಾರಿಕೆಯಲ್ಲಿ ಬಳಸುವ ರಾಸಾಯನಿಕವು ಶೇ.30 ರಿಂದ 40 ರಷ್ಟು ಕಡಿಮೆ ಪ್ರಮಾಣದಲ್ಲಿರುತ್ತದೆ. ಪಟಾಕಿ ಸಿಡಿಸುವ ಸಂದರ್ಭದಲ್ಲಿ ಹೊರಸೂಸುವ ರಾಸಾಯನಿಕ ಹೊಗೆ ಧೂಳನ್ನು ಕಡಿಮೆ ಮಾಡುವ ವಾತಾವರಣ ಪರಿವೇಷ್ಠಕ ಗಾಳಿಯಲ್ಲಿ ತೇಲಾಡುವ ಧೂಳಿನ ಕಣಗಳು So2 ಮತ್ತು No2 ಅಂಶಗಳ ಪ್ರಮಾಣವು ಶೇ.30 ರಷ್ಟು ಕಡಿಮೆಯಾಗಲಿದೆ.
ನಗರ ಮತ್ತು ಪಟ್ಟಣದ ಚಿಕ್ಕ ಚಿಕ್ಕ ಬೀದಿಗಳಲ್ಲಿ ಪಟಾಕಿ ಮತ್ತು ಸಿಡಿಮದ್ದುಗಳನ್ನು, ಬಾಣ ಬಿರುಸುಗಳನ್ನು ಉಪಯೋಗಿಸುವುದರಿಂದ ಅಲ್ಲಿನ ನಿವಾಸಿಗಳಿಗೆ ಹಾನಿಯುಂಟಾಗುವ ಅಥವಾ ಬೆಂಕಿ ಹಾಗೂ ಸ್ಪೋಟದಿಂದ ಅಪಾಯಗಳು ಆಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪಟಾಕಿ ಹಾಗೂ ಸಿಡಿಮದ್ದುಗಳನ್ನು ವಸತಿ ಪ್ರದೇಶಗಳಲ್ಲಿ ಉಪಯೋಗಿಸುವ ಬದಲು ಮೈದಾನಗಳಲ್ಲಿ ಒಟ್ಟಾಗಿ ಸೇರಿ ಸಿಡಿಸಲು ವಿನಂತಿಸಲಾಗಿದೆ. ಅಲ್ಲದೇ ದೀಪಾವಳಿ ಹಬ್ಬವನ್ನು ಸಿಡಿಮದ್ದು, ಪಟಾಕಿಗಳನ್ನು ಉಪಯೋಗಿಸದೇ ದೀಪಾವಳಿ ಹಬ್ಬವನ್ನು ದೀಪದ ಹಬ್ಬವನ್ನಾಗಿ ಆಚರಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಪ್ಪಳ ಪ್ರಾದೇಶಿಕ ಕಚೇರಿಯ ಜಿಲ್ಲಾ ಪರಿಸರ ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.
Comments are closed.