ಕನ್ನಡ ನಾಡು ನುಡಿ ಸೇವೆಗೆ ಸದಾಕಾಲ ಬದ್ಧರಾಗಿದ್ದೇವೆ- ಸಚಿವ ಶಿವರಾಜ ತಂಗಡಗಿ

Get real time updates directly on you device, subscribe now.

69ನೇ ಕರ್ನಾಟಕ ರಾಜ್ಯೋತ್ಸವ: ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ
ನಮ್ಮ ಸರ್ಕಾರವು ಕನ್ನಡ ನಾಡು ನುಡಿ ಸೇವೆಗೆ ಸದಾಕಾಲ ಬದ್ಧವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಹೇಳಿದರು.
ಅವರು ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 69ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು. ಕರ್ನಾಟಕ ರಾಜ್ಯವು ಏಕೀಕರಣವಾಗಿ 68 ವರ್ಷಗಳು ಪೂರ್ಣಗೊಂಡಿರುವ ಈ ಶುಭ ಸಂದರ್ಭದಲ್ಲಿ ನಾಡಿನಾದ್ಯಂತ ಎಲ್ಲಾ ಕಡೆ ಸುಖ-ಶಾಂತಿ, ನೆಮ್ಮದಿ ನೆಲೆಸುವಂತಾಗಲಿ ಎಂದು ನಾಡದೇವತೆ ತಾಯಿ ಭುವನೇಶ್ವರಿಯಲ್ಲಿ ನಾನು ಪ್ರಾರ್ಥಿಸುತ್ತೇನೆ.
ಆಲೂರು ವೆಂಕಟರಾವ್ ಅವರು 1905ರಲ್ಲಿಯೇ ಕರ್ನಾಟಕ ಏಕೀಕರಣ ಚಳುವಳಿಯೊಂದಿಗೆ ರಾಜ್ಯವನ್ನು ಏಕೀಕರಿಸುವ ಕನಸನ್ನು ಕಂಡ ಮೊದಲ ವ್ಯಕ್ತಿಯಾಗಿದ್ದರು. ಬ್ರಿಟಿಷರ ಅಧಿಕಾರದ ಅವಧಿಯಲ್ಲಿ ಹರಿದು ಹಂಚಿ ಹೋಗಿದ್ದ ಕರ್ನಾಟಕವನ್ನು ಏಕೀಕರಣ ಚಳವಳಿ ಮೂಲಕ ಹಲವು ವರ್ಷಗಳವರೆಗೆ ನಿರಂತರ ಹೋರಾಟದ ಪ್ರತಿಫಲವಾಗಿ 1956ರ ನವೆಂಬರ್ 01 ರಂದು ನಮ್ಮ ರಾಜ್ಯ ಉದಯವಾಯಿತು. ರಾಜ್ಯದ ಪ್ರಗತಿಗೆ ಭದ್ರ ಬುನಾದಿ ಹಾಕಿದ ಅಂದಿನ ಮುಖ್ಯಮಂತ್ರಿಗಳಾದ ದಿ.  ಡಿ.ದೇವರಾಜ ಅರಸುರವರ ಗಟ್ಟಿ ನಿರ್ಧಾರದಿಂದ 1973ರ ನವೆಂಬರ್ 01 ರಂದು ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ಮರು ನಾಮಕರಣ ಮಾಡಿದರು.
ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ ಅನೇಕ ಮಹನೀಯರಲ್ಲಿ ಸಾಹಿತಿಗಳಾದ ಬಿ.ಎಂ.ಶ್ರೀಕಂಠಯ್ಯ, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಕುವೆಂಪು, ಕೆ.ಶಿವರಾಂ ಕಾರಂತರು, ದ.ರಾ.ಬೇಂದ್ರೆಯವರು ಹಾಗೂ ಕೆ.ಎನ್ ಕೃಷ್ಣರಾವ್ ಮತ್ತು ಇನ್ನೂ ಹಲವು ಮಹನೀಯರನ್ನು ಈ ಸಂದರ್ಭದಲ್ಲಿ ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಕೊಪ್ಪಳ ಜಿಲ್ಲೆಯ ಪಾತ್ರವೂ ಅಷ್ಟೇ ಪ್ರಮುಖವಾದುದಾಗಿದೆ. ಕೊಪ್ಪಳ ಜಿಲ್ಲೆಯ ಅಳವಂಡಿ ಶಿವಮೂರ್ತಿಸ್ವಾಮಿ, ಶಿರೂರು ವೀರಭದ್ರಪ್ಪ ತೆಗ್ಗಿನಮನಿ, ಶಂಕರಗೌಡ್ರು, ಪ್ರಭುರಾಜ ಪಾಟೀಲ್ ಸಂಗನಾಳ, ಪಂಚಾಕ್ಷರಿ ಹಿರೇಮಠ, ಸೋಮಪ್ಪ ಡಂಬಳ, ದೇವೇಂದ್ರಕುಮಾರ ಹಕಾರಿ, ಭೀಮನಗೌಡ ಪಾಟೀಲ್, ಹನುಮರಡ್ಡಿ ಕಲ್ಗುಡಿ, ಪಂಚಪ್ಪ ಶೆಟ್ಟರು, ಹಂಜಿ ಕೊಟ್ರಪ್ಪ, ಮುಂತಾದವರು ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ್ದನ್ನು ಈ ಮಹನೀಯರನ್ನು ಸ್ಮರಿಸಲೇಬೇಕೆಂದು ಹೇಳಿದರು.
ರಾಷ್ಟçಕವಿ ಕುವೆಂಪು ಅವರು ಹೇಳುವಂತೆ ಕರ್ನಾಟಕವು ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ವಿವಿಧತೆಯಲ್ಲಿ ಏಕತೆ ನೆಲೆಸಿದೆ. ಕನ್ನಡನಾಡು ಸಂಪನ್ಮೂಲ ಹಾಗೂ ಸಂಸ್ಕೃತಿಯಿAದ ಶ್ರೀಮಂತವಾಗಿದೆ. ಆದಿ ಕವಿ ವಾಲ್ಮೀಕಿಯಿಂದ ಆರಂಭವಾಗಿ ಪಂಪ, ರನ್ನ ಮೊದಲಾದ ಕವಿಗಳು ತಮ್ಮ ಕಾವ್ಯದಲ್ಲಿ ಕನ್ನಡ ನಾಡು ನುಡಿಯ ಬಗ್ಗೆ ಮನದುಂಬಿ ಹೊಗಳಿದ್ದಾರೆ ಎಂದರು.
2024ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯು ಕೊಪ್ಪಳ ಜಿಲ್ಲೆಯ ಇಬ್ಬರಿಗೆ ಲಭಿಸಿದ್ದು, ಸಾಹಿತ್ಯ ಕ್ಷೇತ್ರದಿಂದ ಹಿರಿಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಹಾಗೂ ಮಾಧ್ಯಮ ಕ್ಷೇತ್ರದಿಂದ ಎ.ಜಿ.ಕಾರಟಗಿ ಅವರಿಗೆ ಈ ಪ್ರಶಸ್ತಿ ಸಿಕ್ಕಿದೆ ಮತ್ತು ಕರ್ನಾಟಕ ಸಂಭ್ರಮ-50ರ ಸುವರ್ಣ ಸಂಭ್ರಮ ಪ್ರಶಸ್ತಿ ಕೊಪ್ಪಳ ಜಿಲ್ಲೆಯ ಮೂರು ಜನರಿಗೆ ಲಭಿಸಿದ್ದು, ವೈದ್ಯಕೀಯ ಕ್ಷೇತ್ರದಿಂದ ಡಾ.ಚಂದ್ರಪ್ಪ, ಸಾಹಿತ್ಯ ಕ್ಷೇತ್ರದಿಂದ ಡಾ ಬಿ.ವಿ.ಶಿರೂರ ಹಾಗೂ ಚಿತ್ರಕಲೆ ಕ್ಷೇತ್ರದಿಂದ ರುಕ್ಮಿಣಿ ಬಾಯಿ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಎಲ್ಲಾ ಸಾಧಕರಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆಂದು ಸಚಿವರು ಹೇಳಿದರು.
ಕನ್ನಡ ಭಾಷೆಯಲ್ಲಿ ತಂತ್ರಜ್ಞಾನದ ಅಭಿವೃದ್ಧಿಗೆ ನಮ್ಮ ಸರಕಾರವು ಹೆಚ್ಚಿನ ಒತ್ತು ನೀಡಿದೆ. ಕನ್ನಡವನ್ನು ಕನ್ನಡಿಗರೆಲ್ಲರು ಮಾತನಾಡಿದಾಗ ಮತ್ತು ಬಳಸಿದಾಗ ಮಾತ್ರ ಕನ್ನಡದ ಬೆಳವಣಿಗೆ ಸಾಧ್ಯವಿದೆ. ಕನ್ನಡದ ಲಿಪಿಯನ್ನು ಮುಂದಿನ ಜನಾಂಗಕ್ಕೂ ಬರೆಯಲು ಕಲಿಸಿದಾಗ ಮಾತ್ರ ಈ ಭಾಷೆಯನ್ನು ಉಳಿಸಿ, ಬೆಳಸಿಕೊಂಡು ಹೋಗಲು ಸಾಧ್ಯವಾಗುತ್ತದೆ. ನಮ್ಮ ರಾಜ್ಯ ಸರ್ಕಾರವು ಕನ್ನಡ ನಾಡು ನುಡಿ ಸೇವೆಗೆ ಸದಾಕಾಲ ಬದ್ಧವಾಗಿದೆ ಎಂದರು.
ಮುಖ್ಯ ಮಂತ್ರಿಗಳು ಕರ್ನಾಟಕ ಸಂಭ್ರಮ-50ರ ನಿಮಿತ್ಯವಾಗಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ನವೆಂಬರ್ 01 2024ರಂದು ಪ್ರತಿಷ್ಠಾಪಿಸಲು ಸೂಚಿಸಿದ್ದು, ಅದರಂತೆ ಕೊಪ್ಪಳ ಜಿಲ್ಲೆಯಲ್ಲಿ ಈ ದಿನ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಕರ್ನಾಟಕದ ಸಾಹಿತ್ಯ ಪರಂಪರೆಯನ್ನು ಬಿಂಬಿಸುವ ಹಾಗೂ ಕನ್ನಡದ ಮೊಟ್ಟಮೊದಲ ಶಾಸನವಾದ  “ಹಲ್ಮಿಡಿ ಶಾಸನದ” ಪ್ರತಿಕೃತಿಯನ್ನು ಪ್ರತಿಷ್ಠಾಪಿಸಲಾಯಿತು ಎಂದು ತಿಳಿಸಿದರು.
*ಗ್ಯಾರಂಟಿ ಯೋಜನೆಗಳು:* ರಾಜ್ಯ ಸರ್ಕಾರದ ಮಹತ್ವದ ಕಾರ್ಯಕ್ರಮಗಳಾದ ಗ್ಯಾರಂಟಿ ಯೋಜನೆಗಳು ಕೊಪ್ಪಳ ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿಯಲ್ಲಿ 2023ರ ಆಗಸ್ಟ್ 1 ರಿಂದ 2024ರ ಸೆಪ್ಟೆಂಬರ್ 30ರವರೆಗೆ ಒಟ್ಟು 2,74,780 ಗ್ರಾಹಕರು ಈ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದಾರೆ. ಗೃಹಲಕ್ಷೀ ಯೋಜನೆಯಡಿಯಲ್ಲಿ ಆಗಸ್ಟ್-2024ರ ಅಂತ್ಯಕ್ಕೆ ಒಟ್ಟು 3,21,487 ಫಲಾನುಭವಿಗಳು ಈ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದು, ಈವರೆಗೆ 3,10,703 ಫಲಾನುಭವಿಗಳಿಗೆ ಮಾಹೆಯಾನ ರೂ.2000 ರಂತೆ ಈ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದಾರೆ.
ಅನ್ನಭಾಗ್ಯ ಯೋಜನೆಯಡಿಯಲ್ಲಿ ಒಟ್ಟು 11,84,059 ಸದಸ್ಯರಿಗೆ ಸರ್ಕಾರದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಂತೆ ಪ್ರತಿ ಸದಸ್ಯರಿಗೆ 5 ಕೆ.ಜಿ. ಆಹಾರ ಧಾನ್ಯವನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿದ್ದು ಹಾಗೂ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿ ಬದಲಿಗೆ ಪ್ರತಿ ಸದಸ್ಯರಿಗೆ 170 ರೂ. ನೇರ ನಗದು ವರ್ಗಾವಣೆ ಮೂಲಕ (ಡಿ.ಬಿ.ಟಿ) ಹಣವನ್ನು ಕುಟುಂಬದ ಮುಖ್ಯಸ್ಥರ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿಯಲ್ಲಿ ಒಟ್ಟು 14,447 ಡಿಪ್ಲೋಮಾ ಹಾಗೂ ಪದವೀಧರರಿಗೆ ರೂ. 4,30,68,000 ಗಳ ನಿರುದ್ಯೋಗ ಭತ್ಯೆಯನ್ನು ಪಾವತಿ ಮಾಡಲಾಗಿದೆ. ಅದೇ ರೀತಿ ಶಕ್ತಿ ಯೋಜನೆಯಡಿಯಲ್ಲಿ 2023ರ ಜೂನ್ 11 ರಿಂದ 2024ರ ಅಕ್ಟೋಬರ್ 25ರವರೆಗೆ ಒಟ್ಟು 532.51 ಲಕ್ಷ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು, ಶಕ್ತಿ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದಾರೆ ಎಂದು ಹೇಳಿದರು.
*ಕೃಷಿ ಇಲಾಖೆ:* ಈ ವರ್ಷ ಜಿಲ್ಲೆಯ ವಾಡಿಕೆ ಮಳೆ 571.20 ಮಿ.ಮೀ. ಇದ್ದು, 585.30 ಮಿ.ಮೀ. ವಾಸ್ತವಿಕ ಮಳೆಯಾಗಿರುತ್ತದೆ. 2% ಅಧಿಕ ಮಳೆ ಆಗಿರುತ್ತದೆ. ಹಿಂಗಾರು ಹಂಗಾಮಿನಲ್ಲಿ ಜಿಲ್ಲೆಯ ಬಿತ್ತನೆ ಗುರಿ 1.69 ಲಕ್ಷ ಹೆಕ್ಟರ್ ಇದ್ದು, ಇದರಲ್ಲಿ 0.66 ಲಕ್ಷ ಹೆಕ್ಟರ್ ಶೇ 39.03 ಪ್ರದೇಶದಲ್ಲಿ ಬಿತ್ತನೆ ಪ್ರಗತಿಯಲ್ಲಿರುತ್ತದೆ. ಈ ವರ್ಷ ಹಿಂಗಾರು ಹಂಗಾಮು ಆಶಾದಾಯಕವಾಗಿರುತ್ತದೆ. ಹಿಂಗಾರು ಹಂಗಾಮಿನ ಮುಖ್ಯ ಬೆಳೆಗಳಾದ ಜೋಳ, ಕಡಲೆ, ಶೇಂಗಾ, 16115 ಕ್ವಿಂಟಲ್ ದಾಸ್ತಾನು ಮಾಡಲಾಗಿದ್ದು, 11824 ಕ್ವಿಂಟಲ್ ಬೀಜ ರೈತರಿಗೆ ವಿತರಣೆ ಮಾಡಲಾಗಿದ್ದು, 4291 ಕ್ವಿಂಟಲ್ ದಾಸ್ತಾನಿದೆ. ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಯಾವುದೇ ತರಹದ ಕೊರತೆ ಇರುವುದಿಲ್ಲ.
2023-24ನೇ ಸಾಲಿನಲ್ಲಿ ಬೆಳೆವಿಮೆ ಒಟ್ಟು ಹಿಂಗಾರು ಮತ್ತು ಮುಂಗಾರು ಹಂಗಾಮಿನಲ್ಲಿ 75,519 ಫಲಾನುಭವಿಗಳಿಗೆ ರೂ 84.14 ಕೋಟಿ ಹಣವನ್ನು ರೈತರ ಖಾತೆಗೆ ಜಮೆ ಮಾಡಲಾಗಿದೆ. ಕೃಷಿ ಹಾಗೂ ಕೃಷಿ ಸಂಬAಧಿತ ಇಲಾಖೆಗಳ ಸಹಭಾಗಿತ್ವದಲ್ಲಿ ಜಿಲ್ಲೆಯಲ್ಲಿರುವ ತೋಟ ಹಾಗೂ ಅರಣ್ಯ ಬೆಳೆಗಳ ಕ್ಷೇತ್ರ ಹೆಚ್ಚಿಸಲು 5 ವರ್ಷದಲ್ಲಿ 0.50 ಲಕ್ಷ ಹೆಕ್ಟರ್ ಯಿಂದ 1.50 ಲಕ್ಷ ಹೆಕ್ಟರ್‌ಗೆ ಹೆಚ್ಚಿಸಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದರು.
*ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ:* ಕೊಪ್ಪಳ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಒಟ್ಟು 67 ವಸತಿ ನಿಲಯಗಳು ಕಾರ್ಯನಿರ್ವಹಿಸುತ್ತಿದ್ದು, ಒಟ್ಟು 6594 ವಿದ್ಯಾರ್ಥಿಗಳು ಪ್ರವೇಶ ಸೌಲಭ್ಯ ಪಡೆದುಕೊಂಡಿರುತ್ತಾರೆ. ಜಿಲ್ಲೆಯಲ್ಲಿ ಒಟ್ಟು 10 ಖಾಸಗಿ ವಸತಿ ನಿಲಯಗಳು, 07 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಮತ್ತು 01 ಅಲೆಮಾರಿ/ಅರೆಅಲೆಮಾರಿ ಆಶ್ರಮ ಶಾಲೆಗಳಲ್ಲಿ 2,327 ವಿದ್ಯಾರ್ಥಿಗಳಿಗೆ ಪ್ರವೇಶ ಸೌಲಭ್ಯ ಕಲ್ಪಿಸಲಾಗಿದೆ. ಒಟ್ಟು 51 ಸ್ವಂತ ಕಟ್ಟಡಗಳಿದ್ದು, 06 ವಸತಿ ನಿಲಯಗಳಿಗೆ ಸ್ವಂತ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿವೆ. 10 ನಿಲಯಗಳಿಗೆ ಕೆ.ಕೆ.ಆರ್.ಡಿ.ಬಿ. ಅನುದಾನದಲ್ಲಿ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಅನುಮೋದನೆಗಾಗಿ ಕ್ರಮವಹಿಸಲಾಗಿದೆ. ಒಟ್ಟು 07 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಒಟ್ಟು 04 ವಸತಿ ಶಾಲೆಗಳು ಸ್ವಂತ ಕಟ್ಟಡದಲ್ಲಿ ನಿರ್ವಹಣೆಯಾಗುತ್ತಲಿವೆ. 03 ವಸತಿ ಶಾಲೆಗಳಿಗೆ ನಿವೇಶನಗಳು ಲಭ್ಯವಿದ್ದು, ಕಟ್ಟಡ ಕಾಮಗಾರಿ ಪ್ರಾರಂಭಿಸಲು ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ.

 

Koppal ಜಿಲ್ಲಾ ಕ್ರಿಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವದ ನಿಮಿತ್ಯ ಧ್ವಜಾರೋಹಣ -ಶಿವರಾಜ್ ತಂಗಡಗಿ

ನಾಲ್ಕು ದಿಕ್ಕು ಕನ್ನಡ ದಿನಪತ್ರಿಕೆ
Subscribe our Channel
https://youtube.com/@kannadanet

2024-25ನೇ ಸಾಲಿನಲ್ಲಿ ಕೊಪ್ಪಳ ಜಿಲ್ಲೆಗೆ 5 ಬಾಲಕರ 5 ಬಾಲಕಿಯರ ತಲಾ 100 ಸಂಖ್ಯಾಬಲದ ಒಟ್ಟು 10 ಮೆಟ್ರಿಕ್ ನಂತರ ನಿಲಯಗಳು, ಮತ್ತು ಕನಕಗಿರಿ ಪಟ್ಟಣಕ್ಕೆ ಹೊಸದಾಗಿ 100 ಸಂಖ್ಯಾಬಲದ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ ಮಂಜೂರಾಗಿದ್ದು, ಈ ಶಾಲೆಯನ್ನು ಪ್ರಸ್ತುತ ಸಾಲಿನಿಂದ ಪ್ರಾರಂಭಿಸಲು ಕ್ರಮವಹಿಸಲಾಗಿದೆ. 2024-25 ನೇ ಸಾಲಿನಲ್ಲಿ ಶುಲ್ಕ ಮರುಪಾವತಿ 2020-21 ರಿಂದ 2023-24 ನೇ ಸಾಲಿನಲ್ಲಿ ಬಾಕಿ ಇರುವ 3973 ವಿದ್ಯಾರ್ಥಿಗಳಿಗೆ ರೂ.1,40,89,694 ಗಳನ್ನು ಡಿ.ಬಿ.ಟಿ. ಮೂಲಕ ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಜಮಾ ಮಾಡಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು.
*ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ:* 2024-25ನೇ ಸಾಲಿನಲ್ಲಿ ಹೊಸದಾಗಿ ಬಂಡಿ, ಬಳಗೇರಿ & ಚಿಕ್ಕಮ್ಯಾಗೇರಿಗಳಿಗೆ ವಿಶೇಷ ಆರೋಗ್ಯ ಸಂಸ್ಥೆಗಳು ಎಂದು ಪರಿಗಣಿಸಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಾನ್ಯ ಆರೋಗ್ಯ ಸಚಿವರಿಂದ ಇತ್ತೀಚೆಗೆ ಲೋಕಾರ್ಪಣೆ ಮಾಡಲಾಗಿದೆ. ಸೆಪ್ಟೆಂಬರ್ 17ರಂದು ಕಲಬುರಗಿಯಲ್ಲಿ ನಡೆದ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ಕುಷ್ಟಗಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಹನುಮನಾಳ ಆರೋಗ್ಯ ಕೇಂದ್ರವನ್ನು 30 ಹಾಸಿಗೆಯ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲು ಅನುಮೋದನೆಯಾಗಿರುತ್ತದೆ. ಅತಿ ಶೀಘ್ರವಾಗಿ ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಕುಷ್ಟಗಿ ತಾಲೂಕಿನ ಲಿಂಗದಹಳ್ಳಿ, ಹಿರೇಬನ್ನಿಗೋಳ ಮತ್ತು ಕನಕಗಿರಿ ತಾಲೂಕಿನ ಜೀರಾಳ, ಗೌರಿಪುರ ಗ್ರಾಮಗಳಲ್ಲಿ ಒಟ್ಟು 04 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಕೊಪ್ಪಳ ನಗರಕ್ಕೆ 01 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರಾಗಿವೆ.
ಜಿಲ್ಲೆಯ ಕನಕಗಿರಿ, ಕುಕುನೂರು ಮತ್ತು ಕಾರಟಗಿ ತಾಲೂಕುಗಳಲ್ಲಿನ 30 ಹಾಸಿಗೆಗಳ ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ಗಂಗಾವತಿ ಉಪ-ವಿಭಾಗ ಆಸ್ಪತ್ರೆಯನ್ನು 100 ಹಾಸಿಗೆಯಿಂದ 150 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೇಗೇರಿಸಲಾಗಿದೆ. ಕೊಪ್ಪಳ ತಾಲೂಕಿನ ಹಿರೇಸಿಂಧೋಗಿ, ಮುನಿರಾಬಾದ ಮತ್ತು ಕುಷ್ಟಗಿ ತಾಲೂಕಿನ ತಾವರಗೇರಾ ಆಸ್ಪತ್ರೆಗಳನ್ನು 30 ಹಾಸಿಗೆಯಿಂದ 50 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೇಗೇರಿಸಲಾಗಿದೆ. ಕುಷ್ಟಗಿ ತಾಲೂಕಿನ ಹನುಮಸಾಗರ ಮತ್ತು ಮುದೇನೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರವಗಳನ್ನಾಗಿ ಉನ್ನತೀಕರಿಸಲಾಗಿದೆ. ಆ ಮೂಲಕ ಕೊಪ್ಪಳ ಜಿಲ್ಲೆಯ ಜನತೆಗೆ ಅತ್ಯುತ್ತಮ ವೈದ್ಯಕೀಯ ಸೇವೆ ನೀಡಲು ಸರ್ಕಾರ ಶ್ರಮಿಸುತ್ತಿದೆ ಎಂದು ಹೇಳಿದರು.
*ಪ್ರವಾಸೋದ್ಯಮ ಇಲಾಖೆ:* ಮುಖ್ಯಮಂತ್ರಿಗಳು, 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ (371) ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕರ್ನಾಟಕ ಪ್ರವಾಸೋದ್ಯಮ ನೀತಿಯನ್ನು ಮತ್ತಷ್ಟು ಹೂಡಿಕೆದಾರರ ಹಾಗೂ ಪ್ರವಾಸಿಗರ ಸ್ನೇಹಿಯಾಗಿ ಮಾಡಲು, ಪರಿಷ್ಕೃತ ಪ್ರವಾಸೋದ್ಯಮ ನೀತಿ 2024-29 ಅನ್ನು ಜಾರಿಗೆ ತರಲಾಗುವುದು ಎಂದು ಘೋಷಿಸಿರುತ್ತಾರೆ ಎಂದರು.
*ಜಿಲ್ಲಾ ಪಂಚಾಯತಿ:* ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ 2024-25ನೇ ಸಾಲಿಗೆ 82 ಲಕ್ಷ ಮಾನವ ದಿನಗಳ ಸೃಜನೆಯ ಗುರಿಯಿದ್ದು, ಅಕ್ಟೋಬರ್ 30-10-2024 ಕ್ಕೆ 61.30 ಲಕ್ಷ ಮಾನವ ದಿನಗಳು ಸೃಜಿಸಿ ಶೇ.75ರಷ್ಟು ಪ್ರಗತಿ ಸಾಧಿಸಲಾಗಿದೆ. ಸ್ವಚ್ಚ ಭಾರತ ಮಿಷನ್ (ಗ್ರಾ) ಯೋಜನೆಯಡಿ 2023-24ನೇ ಸಾಲಿನಲ್ಲಿ ಜಿಲ್ಲೆಗೆ ಒಟ್ಟು 5000 ವೈಯಕ್ತಿಕ ಶೌಚಾಲಯಗಳ ನಿರ್ಮಾಣದ ಗುರಿ ಹೊಂದಿದ್ದು, ಅದರಲ್ಲಿ ಈಗಾಗಲೇ 4754 ವೈಯಕ್ತಿಕ ಗೃಹ ಶೌಚಾಲಯಗಳು ಪೂರ್ಣಗೊಂಡಿರುತ್ತವೆ. ಬಾಕಿ ಉಳಿದ ಕಾಮಗಾರಿಗಳು ಪ್ರಗತಿ ಹಂತದಲ್ಲಿರುತ್ತದೆ.
ಸಂಜೀವಿನಿ ಎನ್.ಆರ್.ಎಲ್.ಎಂ. ಯೋಜನೆಯಡಿ ಸ್ವ-ಸಹಾಯ ಗುಂಪುಗಳ ಹಾಗೂ ಒಕ್ಕೂಟಗಳ ವಿವರ ಸಂಜೀವಿನಿ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ 153 ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳನ್ನು ರಚನೆ ಮಾಡಿ ಸದರಿ ಒಕ್ಕೂಟಗಳಲ್ಲಿ 10381 ಸ್ವ-ಸಹಾಯ ಗುಂಪುಗಳನ್ನು ರಚನೆ ಮಾಡಿ 1,05,117 ಸದಸ್ಯರುಗಳನ್ನು ಒಳಗೊಂಡಿರುತ್ತದೆ. ಜಿಲ್ಲೆಯಲ್ಲಿ ಒಟ್ಟು 07 ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟಗಳನ್ನು ರಚನೆ ಮಾಡಲಾಗಿದೆ ಎಂದು ತಿಳಿಸಿದರು.
*ಜಿಲ್ಲಾ ನಗರಾಭಿವೃದ್ಧಿ ಕೋಶ:* ಕೊಪ್ಪಳ ಜಿಲ್ಲೆಯ 7-ನಗರ ಸ್ಥಳೀಯ ಸಂಸ್ಥೆಗಳಿಗೆ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸಲು ಅಮೃತ 2.0 ಯೋಜನೆಯಡಿಯಲ್ಲಿ ಒಟ್ಟು ರೂ.604.96 ಕೋಟಿಗಳ ಕಾಮಗಾರಿ ಮಂಜೂರಿಯಾಗಿದ್ದು, ರೂ.576.96 ಕೋಟಿ ಕಾಮಗಾರಿ ಪ್ರಗತಿಯಲ್ಲಿದ್ದು, ರೂ.28.00 ಕೋಟಿ ಕಾಮಗಾರಿ ಟೆಂಡರ್ ಪ್ರಕ್ರಿಯೆಯಲ್ಲಿರುತ್ತದೆ. ಕೊಪ್ಪಳ ನಗರದ ವ್ಯಾಪ್ತಿಯಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಅಂದಾಜು ಮೊತ್ತ ರೂ.20.00 ಕೋಟಿಗಳಿಗೆ ಗಂಗಾವತಿ ನಗರದ ವ್ಯಾಪ್ತಿಯಲ್ಲಿ ಅಂದಾಜು ಮೊತ್ತ ರೂ.30.00 ಕೋಟಿಗಳಿಗೆ ಯೋಜನೆ ರೂಪಿಸಲಾಗಿದ್ದು, ಡಿಪಿಆರ್ ತಯಾರಿಸುವ ಹಂತದಲ್ಲಿರುತ್ತದೆ.  ಮಾನ್ಯ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) ಯೋಜನೆ (ಹಂತ-4)ರಡಿ ಜಿಲ್ಲೆಯಾದ್ಯಂತ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಂದಾಜು ಮೊತ್ತ ರೂ.106.25 ಕೋಟಿಗಳ ಅಭಿವೃದ್ದಿ ಕಾಮಗಾರಿಗಳು ಪ್ರಗತಿಯಲ್ಲಿರುತ್ತವೆ ಎಂದರು.
*ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ:* 2024- 25ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಕೊಪ್ಪಳ ಜಿಲ್ಲೆಗೆ ಮೈಕ್ರೋ ವಲಯದಲ್ಲಿ 238.81 ಕೋಟಿ ರೂ. ಹಾಗೂ ಮ್ಯಾಕ್ರೋ ವಲಯದಲ್ಲಿ 128.59 ಕೋಟಿ ರೂ. ಹೀಗೆ ಒಟ್ಟು 367.40 ಕೋಟಿ ಅನುದಾನವನ್ನು ನಿಗದಿಪಡಿಸಲಾಗಿರುತ್ತದೆ. ಕ್ರಿಯಾಯೋಜನೆ ಅನುಮೋದನೆ ಪಕ್ರಿಯೆ ಹಂತದಲ್ಲಿದೆ ಎಂದ ಸಚಿವರು, “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎನ್ನುವ ಕವಿವಾಣಿಯಂತೆ ಕನ್ನಡ ನಮ್ಮೆಲ್ಲರ ಮನೆ-ಮನಗಳಲ್ಲಿ ಬೆಳಗಲಿ ಎನ್ನುತ್ತ ಮತ್ತೊಮ್ಮೆ ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.
*ಆಕರ್ಷಕ ಪಥಸಂಚಲನ:* ಕನ್ನಡ ರಾಜ್ಯೋತ್ಸವದ ನಿಮಿತ್ತ ಪೊಲೀಸ್ ಇಲಾಖೆ, ಸಶಸ್ತ್ರ ಮೀಸಲು ಪಡೆ, ಗೃಹ ರಕ್ಷಕದಳ, ಭಾರತ ಸೇವಾದಳ, ಎನ್.ಸಿ.ಸಿ, ಭಾರತ್ ಸ್ಕೌಟ್ಸ್ & ಗೈಡ್ಸ್ ತಂಡಗಳು ಜಿಲ್ಲಾ ಕ್ರೀಡಾಂಗಣದಲ್ಲಿ ಆಕರ್ಷಕ ಪಥಸಂಚಲನ ನಡೆಸಿ, ಸಚಿವರಿಗೆ ಗೌರವ ವಂದನೆ ಸಲ್ಲಿಸಿದವು.
*ಜಿಲ್ಲೆಯ ಪ್ರವಾಸಿ ತಾಣಗಳ ಕಿರು ಕೈಪಿಡಿ ಬಿಡುಗಡೆ:* ಪ್ರವಾಸೋದ್ಯಮ ಇಲಾಖೆಯಿಂದ ಸಿದ್ದಪಡಿಸಿದ ಕೊಪ್ಪಳ ಜಿಲ್ಲೆಯ ಪ್ರವಾಸಿ ತಾಣಗಳ ಮಾಹಿತಿಯನ್ನೊಳಗೊಂಡ ಕಿರು ಕೈಪಿಡಿಯನ್ನು ಸಚಿವರು, ಸಂಸದರು ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಿದರು
*ಸಾಂಸ್ಕೃತಿಕ ಕಾರ್ಯಕ್ರಮ, ಬಹುಮಾನ ವಿತರಣೆ ಹಾಗೂ ಸನ್ಮಾನ:* ರಾಜ್ಯೋತ್ಸವದ ನಿಮಿತ್ತ ಭಾಗ್ಯನಗರದ ನವಚೇತನ ಪಿಯು ಕಾಲೇಜು ಹಾಗೂ ಕೊಪ್ಪಳದ ಬಾಲಕಿಯರ ಪದವಿ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಂದ ಕನ್ನಡ ಗೀತೆಗಳಿಗೆ ನೃತ್ಯ ಮಾಡಿದರು. ಪಥಸಂಚಲನದಲ್ಲಿ ವಿಜೇತರಾದ ತಂಡಗಳಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ ಮಕ್ಕಳಿಗೆ ಬಹುಮಾನ ನೀಡಲಾಯಿತು. ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ, ಜಿಲ್ಲೆಗೆ ಹೆಸರು ತಂದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ ಗುಪ್ತಾ, ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ಧಿ, ಕೊಪ್ಪಳ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾವ್ಯ ಚತುರ್ವೇದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್ ಕುಮಾರ್, ಕೊಪ್ಪಳ ತಹಶಿಲ್ದಾರ ವಿಠ್ಠಲ ಚೌಗಲಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಮತ್ತು ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
*ಮೆರವಣಿಗೆ:* 69ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ ನಿಮಿತ್ತ ಬೆಳಿಗ್ಗೆ ಕೊಪ್ಪಳ ತಹಶೀಲ್ದಾರ ಕಚೇರಿಯಿಂದ ಜಿಲ್ಲಾ ಕ್ರೀಡಾಂಗಣದ ವರೆಗೆ ಹಮ್ಮಿಕೊಂಡ ನಾಡ ದೇವತೆ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆಗೆ ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರು ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.  ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ಧಿ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಕೊಪ್ಪಳ ತಹಶಿಲ್ದಾರ ವಿಠ್ಠಲ ಚೌಗಲಾ, ತಾ.ಪಂ ಇಓ ದುಂಡಪ್ಪ ತುರಾದಿ, ನಗರಸಭೆ ಪೌರಾಯುಕ್ತ ಗಣಪತಿ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
****

Get real time updates directly on you device, subscribe now.

Comments are closed.

error: Content is protected !!