ಕೆ.ಕೆ.ಆರ್.ಡಿ.ಬಿ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಮುಗಿಸಿ – ಸಚಿವ ಶಿವರಾಜ ತಂಗಡಗಿ

0

Get real time updates directly on you device, subscribe now.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಕೊಪ್ಪಳ ಜಿಲ್ಲೆಯಲ್ಲಿ ನಡೆಯುತ್ತಿರುವ ಕೆಲಸ ಮತ್ತು ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಮುಗಿಸಿ ಇಲ್ಲದಿದ್ದರೆ  ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಹೇಳಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕೊಪ್ಪಳ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೆ.ಕೆ.ಆರ್.ಡಿ.ಬಿ ಅನುದಾನಡಿ ಕೊಪ್ಪಳ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾದ 2018-19, 2019-20 ಮತ್ತು 2020-21ನೇ ಸಾಲಿನ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಇದರ ಜೊತೆಗೆ 2023-24ನೇ ಸಾಲಿನ ಮುಕ್ತಾಯ ಹಂತದಲ್ಲಿರುವ ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲು ಅನುಷ್ಠಾನಾಧಿಕಾರಿಗಳು ತ್ವರಿತ ಕ್ರಮ ಕೈಗೊಳ್ಳಬೇಕು ಎಂದರು.
ಇನ್ನೂ ಪ್ರಾರಂಭಿಸದೆ ಇರುವ ಕಾಮಗಾರಿಗಳ ಕುರಿತು ಯಾವುದೇ ಸಮಸ್ಯೆಗಳಿದ್ದರೆ, ಕೂಡಲೇ ಅದನ್ನು ಸರಿಪಡಿಸಿ ಆ ಎಲ್ಲಾ ಕಾಮಗಾರಿಗಳು ಸಹ ಈ ಡಿಸೆಂಬರ್ ಮಾಹೆಯೊಳಗೆ ಪ್ರಾರಂಭಿಸಲು ತುರ್ತಾಗಿ ಕ್ರಮ ಕೈಗೊಳ್ಳಬೇಕು. ಈ ಹಿನ್ನೆಲೆಯಲ್ಲಿ ಯಾವುದೇ ಕಾಮಗಾರಿಗಳು ಅಪೂರ್ಣ ಅಥವಾ ಪ್ರಾರಂಭವಾಗದೇ ಬಾಕಿ ಉಳಿದರೆ ಸಂಬಂಧಪಟ್ಟ ಅಧಿಕಾರಿಗಳನ್ನೆ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಸಚಿವರು ಸೂಚನೆ ನೀಡಿದರು.
2024-25ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೈಕ್ರೋ ಮತ್ತು ಮ್ಯಾಕ್ರೋ ಯೋಜನೆಯ ಅನುದಾನದಡಿ ಕೊಪ್ಪಳ ಜಿಲ್ಲೆಗೆ ಮಂಜೂರಾದ ಎಲ್ಲಾ ಕಾಮಗಾರಿಗಳನ್ನು ಟೆಂಡರ್ ಕರೆದು ಅನುಮೋದನೆ ನೀಡಿ, ಅನುಷ್ಠಾನ ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯದೊಳಗೆ ಪ್ರಾರಂಭಕ್ಕೆ ಕ್ರಮ ವಹಿಸಬೇಕು. ಯಾವುದೇ ಕಾರಣಕ್ಕೂ ಅನಗತ್ಯ ವಿಳಂಬ ಮಾಡಬಾರದು. ಕೆ.ಕೆ.ಆರ್.ಡಿ.ಬಿ ಮಂಡಳಿಯ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಹೇಳಿದರು.
ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣವಾಗುತ್ತಿರುವ ರಂಗಮಂದಿರ ಮತ್ತು ಜಿಲ್ಲೆಯ ವಿವಿಧೆಡೆ ನಿರ್ಮಾಣವಾಗುತ್ತಿರುವ ಶಾಲಾ ಕೊಠಡಿಗಳು, ಆರೋಗ್ಯ ಕೇಂದ್ರಗಳು ಹಾಗೂ ಇತರೆ ಕಟ್ಟಡಗಳ ಲೋಕಾರ್ಪಣೆಗಳಿದ್ದರೆ ಸಂಬಂಧಪಟ್ಟ ಅಧಿಕಾರಿಗಳು ನಮ್ಮ ಗಮನಕ್ಕೆ ತನ್ನಿ. ಕಾರಟಗಿ, ಕನಕಗಿರಿ ಹಾಗೂ ಕುಕನೂರು ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ ಮೂರು ತಾಲ್ಲೂಕುಗಳಲ್ಲಿ ಜಮೀನು ಗುರುತಿಸಲು ಆಯಾ ತಹಶಿಲ್ದಾರರು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಟಿ.ಲಿಂಗರಾಜು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರಿದ್ದರು.

Get real time updates directly on you device, subscribe now.

Leave A Reply

Your email address will not be published.

error: Content is protected !!