ಗ್ಯಾರಂಟಿ ಯೋಜನೆಗಳ ಮಾಹಿತಿ ಸಾರ್ವಜನಿಕರಿಗೆ ತಲುಪಿಸಿ – ರೆಡ್ಡಿ ಶ್ರೀನಿವಾಸ

Get real time updates directly on you device, subscribe now.

ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ

  ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಹೆಚ್ಚು ಪ್ರಚಾರ ನೀಡುವುದರ ಮೂಲಕ ಸಾರ್ವಜನಿಕರಿಗೆ ಈ ಯೋಜನೆಗಳ ಮಾಹಿತಿ ತಲುಪಿಸುವ ಕೆಲಸವನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮಾಡಬೇಕೆಂದು ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಹೇಳಿದರು.
ಅವರು ಬುಧವಾರ ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಎಚ್ ಪಟೇಲ್ ಸಭಾಂಗಣದಲ್ಲಿ ನಡೆದ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜನ ಸಾಮಾನ್ಯರ ಏಳ್ಗೆಗಾಗಿ ರಾಜ್ಯ ಸರ್ಕಾರವು ಶಕ್ತಿ ಯೋಜನೆ, ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿದಿ, ಈ ಮಹತ್ತರವಾದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಜನಪರವಾದ ಈ ಕಾರ್ಯಕ್ರಮಗಳನ್ನು ಕೊಪ್ಪಳ ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಿ ಇವುಗಳ ಲಾಭವನ್ನು ಜಿಲ್ಲೆಯ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ಸಿಗಬೇಕು. ಯಾವುದೇ ಅರ್ಹ ಫಲಾನುಭವಿಗಳು ಈ ಯೋಜನೆಗಳಿಂದ ಹೊರಗುಳಿಯದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಪ್ರತಿ ತಿಂಗಳು ನಡೆಯುವ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಭೆಯ ನಡುವಳಿಗಳನ್ನು ಆಯಾ ತಿಂಗಳ 15ನೇ ತಾರೀಖಿನೊಳಗೆ ಜಿಲ್ಲಾ ಸಮಿತಿಗೆ ಸಲ್ಲಿಸಿಬೇಕು. ಇದರಿಂದ ಜಿಲ್ಲಾ ಮಟ್ಟದಲ್ಲಿ ಚರ್ಚೆ ಮಾಡಲು ಅವಶ್ಯಕವಿರುವ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲು ಅನುಕೂಲವಾಗುತ್ತದೆ ಎಂದು ತಾಲೂಕ ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರುಗಳಿಗೆ ತಿಳಿಸಿದರು.
ಗೃಹಲಕ್ಷ್ಮಿ ಯೋಜನೆಯಡಿ ಬಾಕಿ ಇರುವ ಅರ್ಜಿಗಳ ವಿಲೇವಾರಿ ಮಾಡಲು ಆಯಾ ತಾಲೂಕಿನ ಸಿ.ಡಿ.ಪಿ.ಓಗಳು  ಕ್ರಮ ವಹಿಸಬೇಕು. ಬಸ್ ವ್ಯವಸ್ಥೆಗಳ ಸರಿಯಾಗಿ ನಿರ್ವಹಣೆಗೆ ಸೂಕ್ತ ಕ್ರಮ ವಹಿಸಬೇಕೆಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್ ವಿತರಣೆಗೆ ಕ್ರಮ ಕೈಗೊಳ್ಳಿ. ನ್ಯಾಯಬೆಲೆ ಅಂಗಡಿಗಳನ್ನು ಸರಿಯಾದ ಸಮಯಕ್ಕೆ ತೆರೆದು ಜನರಿಗೆ ಆಹಾರ ಧಾನ್ಯಗಳನ್ನು ಸರಿಯಾದ ಪ್ರಮಾಣದಲ್ಲಿ ವಿತರಿಸಬೇಕು. ಸಾರ್ವಜನಿಕರೊಂದಿಗೆ ಉತ್ತಮ ರೀತಿಯಲ್ಲಿ ವ್ಯವಹರಿಸುವಂತೆ ಎಲ್ಲಾ ನ್ಯಾಯಾಬೆಲೆ ಅಂಡಿಗಳ ಮಾಲೀಕರಿಗೆ ನಿರ್ದೇಶನ ನೀಡಬೇಕು ಮತ್ತು ನ್ಯಾಯಾಬೆಲೆ ಅಂಗಡಿಗಳಲ್ಲಿ ಸಿಸಿ ಟಿವಿ ಅಳವಡಿಸಲು ಕ್ರಮ ವಹಿಸಿ.
*ಗೃಹಲಕ್ಷ್ಮಿ:* ಈ ಯೋಜನೆಯಡಿ ಕೊಪ್ಪಳ ಜಿಲ್ಲೆಯಲ್ಲಿ 3,21,494 ಜನ ಮನೆ ಯಜಮಾನಿಯರು ನೋಂದಣಿ ಮಾಡಿಕೊಂಡಿದ್ದು, ಆಗಸ್ಟ್–2023 ರಿಂದ ಆಗಸ್ಟ್-2024 ರವರೆಗೆ ಡಿ.ಬಿ.ಟಿ. ಮೂಲಕ ಒಟ್ಟು 779 ಕೋಟಿ 35 ಲಕ್ಷ 72 ಸಾವಿರ ರೂ.ಗಳನ್ನು ಪಾವತಿಸಲಾಗಿರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.
*ಗೃಹ ಜ್ಯೋತಿ:* ಈ ಯೋಜನೆಯಡಿ ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 2,75,487 ಫಲಾನುಭವಿಗಳು ನೋಂದಣಿಯಾಗಿರುತ್ತಾರೆ. ಆಗಸ್ಟ್-2023 ರಿಂದ ಅಕ್ಟೋಬರ್-2024ರ ಅಂತ್ಯಕ್ಕೆ ಸಬ್ಸಿಡಿ ಮೂಲಕ ಒಟ್ಟು 162.3 ಕೋಟಿ ರೂ.ಗಳನ್ನು ಈ ಯೋಜನೆಗೆ ಪಾವತಿಸಲಾಗಿದ್ದು, ಶೇ 97.10ರಷ್ಟು ಪ್ರಗತಿ ಜಿಲ್ಲೆಯಲ್ಲಿ ಸಾಧಿಸಲಾಗಿದೆ ಎಂದು ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಸಭೆಗೆ ತಿಳಿಸಿದರು.
*ಯುವನಿಧಿ:* ಯೋಜನೆಯಡಿ ಡಿಸೆಂಬರ್-2023 ರಿಂದ ಇಲ್ಲಿಯವರೆಗೆ 14,265 ಪದವಿಧರರಿಗೆ ತಿಂಗಳಿಗೆ ರೂ. 3,000 ರಂತೆ ಹಾಗೂ 182 ಡಿಪ್ಲೋಮಾ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 1,500 ರಂತೆ ಒಟ್ಟು 14,447 ಫಲಾನುಭವಿಗಳಿಗೆ ಡಿ.ಬಿ.ಟಿ. ಮೂಲಕ ಹಣ ವರ್ಗಾಯಿಸಲಾಗಿದ್ದು, ಇದಕ್ಕಾಗಿ ಒಟ್ಟು ಮೊತ್ತ 4.30 ಕೋಟಿ ರೂ.ಗಳನ್ನು ಪಾವತಿಸಲಾಗಿರುತ್ತದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಅಧಿಕಾರಿಗಳು ತಿಳಿಸಿದರು.
*ಅನ್ನಭಾಗ್ಯ:* ಯೋಜನೆಯಡಿ ಕೊಪ್ಪಳ ಜಿಲ್ಲೆಯಲ್ಲಿರುವ ಒಟ್ಟು 3,22,209 ಪಡಿತರ ಚೀಟಿಗಳ ಪೈಕಿ ಆಗಸ್ಟ್-2024ರ ಮಾಹೆಗೆ 2,94,969 ಪಡಿತರ ಚೀಟಿಗಳಿಗೆ 17.98 ಕೋಟಿ ರೂ.ಗಳನ್ನು ಪಾವತಿಸಲು ಕ್ರಮವಹಿಸಲಾಗಿದೆ. ಇದರಲ್ಲಿ 2,35,108 ಪಡಿತರ ಚೀಟಿಗಳಿಗೆ ಈಗಾಗಲೇ ಡಿಬಿಟಿ ಮೊತ್ತವನ್ನು ಪಾವತಿಸಲಾಗಿದೆ ಹಾಗೂ ಉಳಿದ 59,861 ಚೀಟಿಗಳಿಗೆ 3.64 ಕೋಟಿ ರೂ. ಪಾವತಿ ಕಾರ್ಯ ಪ್ರಗತಿಯಲ್ಲಿದೆ ಎಂದು ಆಹಾರ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.
*ಶಕ್ತಿ ಯೋಜನೆ:* ಶಕ್ತಿ ಯೋಜನೆಯಡಿ ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 5.45 ಕೋಟಿ ಮಹಿಳಾ ಪ್ರಯಾಣಿಕರು ಈ ಯೋಜನೆಯಡಿ ಜೂನ್-2023 ರಿಂದ ಅಕ್ಟೋಬರ್-2024 ರವರೆಗೆ ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ಕಲ್ಯಾಣ ಕರ್ನಾಟಕದ ರಸ್ತೆ ಸಾರಿಗೆ ನಿಗಮದ ಕೊಪ್ಪಳ ವಿಭಾಗದ ಅಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಬಿ ಖಾದ್ರಿ, ಅಮರೇಶಪ್ಪ ಎಸ್.ಜಿ., ನಾಗರಜ ಅರಳಿ ಹಾಗೂ ಖಾಸಿಂ ಸಾಬ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಮುಖ್ಯ ಯೋಜನಾ ನಿರ್ದೇಶಕ ಡಿ.ಮಂಜುನಾಥ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಜಿಲ್ಲಾ ಉದ್ಯೋಗ್ಯ ವಿನಿಮತ ಅಧಿಕಾರಿ ಪ್ರಾಣೇಶ್, ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರುಶುರಾಮ ವೈ.ಎಸ್., ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು ಹಾಗೂ ತಾಲ್ಲೂಕಾ ಅಧ್ಯಕ್ಷರು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!