ಸೇನಾ ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸುತ್ತಿರು ಅಭ್ಯರ್ಥಿಗಳಿಗೆ ಸೂಕ್ತ ವ್ಯವಸ್ಥೆ: ಜಿಲ್ಲಾಧಿಕಾರಿ ನಲಿನ್ ಅತುಲ್

Get real time updates directly on you device, subscribe now.

ಕೊಪ್ಪಳ ನವೆಂಬರ್ 26 (ಕರ್ನಾಟಕ ವಾರ್ತೆ): ಡಿಸೆಂಬರ್ 8ರ ವರೆಗೆ ನಮ್ಮ ಜಿಲ್ಲೆಯಲ್ಲಿ ಸೇನಾ ನೇಮಕಾತಿ ರ‍್ಯಾಲಿ ನಡೆಯುತ್ತಿದ್ದು ಇದರಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ತೊಂದರೆಯಾಗದ ರೀತಿಯಲ್ಲಿ ಅವರಿಗೆ ಊಟ, ವಸತಿ ಮತ್ತು ಸ್ವಚ್ಛತೆ ಸೇರಿದಂತೆ ಇತರೆ ಸೂಕ್ತ ವ್ಯವಸ್ಥೆಯನ್ನು ಜಿಲ್ಲಾಡಳಿತದಿಂದ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಅವರು ಮಂಗಳವಾರ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಸೇನಾ ನೇಮಕಾತಿ ರ‍್ಯಾಲಿಗೆ ಭಾರತೀಯ ಸೇನೆಯ ಡೆಪ್ಯುಟಿ ಡೈರೆಕ್ಟರ್ ಜನರಲ್ ಆಫ್ ರಿಕ್ರೂಟಿಂಗ್ ಬೆಂಗಳೂರಿನ ಬ್ರಿಗೇಡಿಯರ್ ಎಸ್.ಕೆ. ಸಿಂಗ್ ಅವರೊಂದಿಗೆ ಚಾಲನೆ ನೀಡಿ ಮಾತನಾಡಿದರು.
ಈ ರ‍್ಯಾಲಿಗೆ 30 ಸಾವಿರಕ್ಕಿಂತ ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. 9130 ಅಭ್ಯರ್ಥಿಗಳು ಅರ್ಹತೆ ಪಡೆದವರು ಈ ರ‍್ಯಾಲಿಯಲ್ಲಿ ಭಾಗವಹಿಸುತ್ತಿದ್ದಾರೆ. ಪ್ರತಿದಿನ 700 ರಿಂದ 900 ಅಭ್ಯರ್ಥಿಗಳಿಗೆ ಕ್ರೀಡಾಂಗಣದಲ್ಲಿ ಅವರ ವಿವಿಧ ಅರ್ಹತಾ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಇದರಲ್ಲಿ ಭಾಗವಹಿಸುತ್ತಿರುವ ಅಭ್ಯರ್ಥಿಗಳಿಗೆ ಶುಭವಾಗಲಿ. ಉತ್ತಮ ಪ್ರದರ್ಶನ ನೀಡುವ ಮೂಲಕ ಭಾರತೀಯ ಸೇನೆಗೆ ಆಯ್ಕೆಯಾಗಿ ಎಂದು ಅಭ್ಯರ್ಥಿಗಳಿಗೆ ಜಿಲ್ಲಾಧಿಕಾರಿಗಳು ಶುಭಾಶಯಗಳನ್ನು ಕೋರಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್ ಅರಸಿದ್ದಿ ಅವರು ಮಾತನಾಡಿ, ಸೇನಾ ನೇಮಕಾತಿ ರ‍್ಯಾಲಿಗೆ ಬರುವ ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ ಸೂಕ್ತ ಪೊಲೀಸ್ ಬಂದೊಬಸ್ತ್ ಒದಗಿಸಲಾಗಿದೆ. ಪೊಲೀಸ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಸೇರಿದಂತೆ ಒಟ್ಟು 150 ಜನರನ್ನು ಈ ರ‍್ಯಾಲಿಗೆ ನಿಯೋಜನೆ ಮಾಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಡೈರೆಕ್ಟರ್ ರಿಕ್ರೂಟಿಂಗ್ ಎ.ಆರ್.ಒ ಬೆಳಗಾವಿಯ ಕರ್ನಲ್ ಎ.ಕೆ. ಉಪಾಧ್ಯಾಯ, ಸುಬೇದಾರ ಮೇಜರ್ ದಿನೇಶ್ ರಾಮ್ ಲೋಹಿಯಾ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಸೇರಿದಂತೆ ಭಾರತೀಯ ಸೇನೆಯ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಅಭ್ಯರ್ಥಿಗಳಿಗೆ ರನ್ನಿಂಗ್, ಲಾಂಗ್‌ಜಂಫ್, ಹೈಜಂಪ್, ಶಾಟಪುಟ್, ಮೇಡಿಕಲ್ ಪರೀಕ್ಷೆ, ಮೂಲ ದಾಖಲಾತಿಗಳ ಪರೀಕ್ಷೆ ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ಒಳಪಡಿಸಲಾಗುತ್ತದೆ. ನವೆಂಬರ್ 26ರಿಂದ ಡಿಸೆಂಬರ್ 8ರ ವರೆಗೆ ಈ ರ‍್ಯಾಲಿ ನಡೆಯುತ್ತಿರುವುದರಿಂದ ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದಿಂದ ಕೊಪ್ಪಳ ರೈಲು ನಿಲ್ದಾಣ ಹಾಗೂ ಕೊಪ್ಪಳ ಕೇಂದ್ರ ಬಸ್ ನಿಲ್ದಾಣದಿಂದ ಜಿಲ್ಲಾ ಕ್ರೀಡಾಂಗಣದವರೆಗೆ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ ಅಭ್ಯರ್ಥಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕೊಪ್ಪಳ ಜಿಲ್ಲಾಡಳಿತವು ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಹಲವು ಸಮಿತಿಗಳನ್ನು ರಚಿಸಿ ಸೇನಾ ನೇಮಕಾತಿ ರ‍್ಯಾಲಿಯನ್ನು ಸುಸೂತ್ರವಾಗಿ ನಡೆಯುವಂತೆ ವ್ಯವಸ್ಥೆ ಮಾಡಿದೆ.

Get real time updates directly on you device, subscribe now.

Comments are closed.

error: Content is protected !!